ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್ ಅನ್ನು ದುರ್ಬಳಕೆ ಮಾಡಿಕೊಂಡಿದ್ದ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ವಹಿಸಬೇಕು ಎಂದು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ಸೆ.4ಕ್ಕೆ ನಿಗದಿಪಡಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದರು.
ಬ್ಯಾಂಕ್ ಪರ ವಾದ ಮಂಡಿಸಿದ ಸುಪ್ರೀಂ ಕೋರ್ಟ್ ಹಿರಿಯ ವಕೀಲ ವೆಂಕಟರಮಣಿ, ಬ್ಯಾಂಕ್‌ನಲ್ಲಿ 50 ಕೋಟಿಗಿಂತಲೂ ಹೆಚ್ಚು ಅವ್ಯವಹಾರ ನಡೆದಿದೆ. ಸಿಬಿಐಗೆ ಮಾತ್ರ ಬ್ಯಾಂಕ್ ಹಗರಣಗಳ ತನಿಖೆ ಮಾಡಲು ಅವಕಾಶವಿದೆ. ಅಲ್ಲದೇ, ಹಗರಣದಲ್ಲಿ ಭಾಗಿಯಾಗಿರುವ ಬ್ಯಾಂಕ್ ಅಧಿಕಾರಿಗಳಲ್ಲದೇ ಇತರರನ್ನೂ ತನಿಖೆ ನಡೆಸಬಹುದು. ಆದರೆ, ರಾಜ್ಯ ಸರ್ಕಾರ ತನಿಖೆಗಾಗಿ ವಿಶೇಷ ತನಿಖಾ ದಳ(ಎಸ್‌ಐಟಿ) ರಚಿಸಿದೆ. ಸಿಬಿಐಗೆ ಅಧಿಕಾರವಿರುವ ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುವುದಕ್ಕೆ ಅವಕಾಶವಿಲ್ಲ ಎಂದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ರಾಜ್ಯದಲ್ಲಿ ನಡೆದಿರುವ ಹಗರಣಗಳ ಕುರಿತು ರಾಜ್ಯ ಪೊಲೀಸರು ವಿಚಾರಣೆ ನಡೆಸಬಹುದು. ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಬೇಕು. ಹೀಗಾಗಿ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.