ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಕೊಂಚ ತಗ್ಗಿದ್ದ ಮುಂಗಾರು ಮಳೆ, ಮತ್ತೆ ಚುರುಕಾಗುವ ಲಕ್ಷಣಗಳು ಕಂಡುಬರುತ್ತಿವೆ. ಈ ಹಿನ್ನೆಲೆಯಲ್ಲಿ ಮತ್ತೆ ಆ ಭಾಗದ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳಿಗೆ ಅನ್ವಯವಾಗುವಂತೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ನಾಲ್ಕು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಇಂದು ಮತ್ತು ನಾಳೆ, ಉತ್ತರ ಒಳನಾಡಿನ ಹಾಸನ ಜಿಲ್ಲೆಗೆ ಇಂದು ಮತ್ತು ನಾಳೆ, ಕೊಡಗು ಜಿಲ್ಲೆಗೆ ಇಂದು ಆರೆಂಜ್ ಮತ್ತು ನಂತರದ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ನಿರಂತರ ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ದಾಖಲಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ನಿರಂತರ ಗಾಳಿ ಬೀಸಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.