ಬೆಂಗಳೂರು:ರಾಜ್ಯದಲ್ಲಿ ಕಳೆದ 15 ದಿನಗಳಿಂದ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಇಂದಿನಿಂದ ಐದು ದಿನ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಒಟ್ಟು 17 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಆರಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮೇಲ್ಮೈ ಸುಳಿಗಾಳಿ, ಟ್ರಫ್ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮೋಡ ಕವಿದ ವಾತಾವರಣವಿದೆ. ಆದ್ದರಿಂದ ಇಂದಿನಿಂದ ಮೇ 22 ರವರೆಗೂ ಮಲೆನಾಡು ಭಾಗದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದೆ.
ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ದಕ್ಷಿಣ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ವರುಣ ಕಾಡಿದರೇನಂತೆ ಚಿನ್ನಸ್ವಾಮಿಯಲ್ಲಿದೆ ಸಬ್ ಏರ್ ವ್ಯವಸ್ಥೆ - Sub Air System in Chinnaswamy
ನೈರುತ್ಯ ಮುಂಗಾರು ಸಕಾಲಕ್ಕೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿದ್ದು, ಬಂಗಾಳಕೊಲ್ಲಿ, ಹಿಂದೂ ಮಹಾಸಾಗರ ಹಾಗೂ ಅರಬ್ಬೀ ಸಮುದ್ರದಲ್ಲಿ ಮಳೆಗೆ ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ.ಎನ್.ಪುವಿಯರಸನ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಳೆ:ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಾಧಾರಣ ಅಥವಾ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಮತ್ತು 22 ಡಿಗ್ರಿ ದಾಖಲಾಗಬಹುದು. ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಹಿನ್ನೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಸಂಜೆ ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಐಪಿಎಲ್ ಪಂದ್ಯದ ಮೇಲೂ ಮಳೆಯ ಕರಿಛಾಯೆ ಉಂಟಾಗಿದೆ.
ಇಂದೂ ಸುರಿದ ಮಳೆ:ಇಂದು ರಾಜಧಾನಿ ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಸಾಧಾರಣ ಮಳೆಯಾಗಿದೆ. ವಿಧಾನಸೌಧ, ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್, ಶಿವಾಜಿನಗರ, ಬಸವನಗುಡಿ, ಜಯನಗರ, ಬನಶಂಕರಿ ಸೇರಿದಂತೆ ಹಲವು ಬಡಾವಣೆಗಳಲ್ಲಿ ಬೆಳಗ್ಗೆ ಮಳೆಯಾಗಿದೆ.
ಇದನ್ನೂ ಓದಿ:ಮಳೆ ಅಬ್ಬರಕ್ಕೆ 12 ಮಂದಿ ಸಾವು; ಮುಂದಿನ 7ರಿಂದ 15 ದಿನಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ - RAIN FORECAST