ಕರ್ನಾಟಕ

karnataka

ETV Bharat / state

ಮುಂದಿನ 4 ವಾರ ಭಾರಿ ಮಳೆ ಮುನ್ಸೂಚನೆ: ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಿಎಂ ಸೂಚನೆ - Rain Precautionary Measures

ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ನಡೆಸಿದ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರವಾಹ ಇರುವಾಗ ನೀರಿಗಿಳಿಯಲು ಜನರನ್ನು ಬಿಡಬಾರದು, ಪೊಲೀಸರ ಸಹಕಾರದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯತ್‌, ಕಂದಾಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಈ ನಿಟ್ಟಿನಲ್ಲಿ ಮುಂಜಾಗರೂಕತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

CM REVIEWS RAIN PREPAREDNESS
ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ನಡೆಸಿದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. (ETV Bharat)

By ETV Bharat Karnataka Team

Published : Aug 16, 2024, 8:42 PM IST

ಬೆಂಗಳೂರು: ಮುಂದಿನ ನಾಲ್ಕು ವಾರಗಳಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ, ಮಲೆನಾಡಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ನಡೆಸಿದ ಸಭೆಯಲ್ಲಿ ಸಿರುಗುಪ್ಪ, ದೇವದುರ್ಗ, ಔರಾದ್‌, ಬೀದರ್‌, ಕಮಲಾನಗರ, ಹುಬ್ಬಳ್ಳಿ, ಶಹಾಪುರ, ಯಾದಗಿರಿ ಮೊದಲಾದ ಒಂಬತ್ತು ತಾಲೂಕುಗಳಲ್ಲಿ ಈಗ ಕಡಿಮೆ ಮಳೆ ಇದೆ. ಆದರೆ, ಈ ತಾಲೂಕುಗಳಲ್ಲಿಯೂ ಉತ್ತಮ ಮಳೆಯಾಗುವುದಾಗಿ ಮುನ್ಸೂಚನೆ ಬಂದಿದೆ. ರಾಜ್ಯದಲ್ಲಿ ಜೂನ್‌ 1ರಿಂದ ಆಗಸ್ಟ್‌ 15ರ ವರೆಗೆ ವಾಡಿಕೆಗಿಂತ ಶೇ. 22ರಷ್ಟು ಹೆಚ್ಚು ಮಳೆಯಾಗಿದ್ದು, ಚಾಮರಾಜನಗರ, ಮಂಡ್ಯ ತುಮಕೂರಿನಲ್ಲಿ ಅತ್ಯಧಿಕ ಮಳೆಯಾಗಿದೆ. 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ಬಾರಿ ಇಡೀ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ ಎಂದರು.

ರಾಜ್ಯಾದ್ಯಂತ 82 ಲಕ್ಷ ಹೆಕ್ಟೇರ್‌ ಗುರಿಗೆ ಎದುರಾಗಿ 70 ಲಕ್ಷ ಹೆಕ್ಟೇರ್‌ ಬಿತ್ತನೆ ಆಗಿದೆ. ಈ ಬಾರಿ ಗುರಿ ಮೀರಿ ಸಾಧನೆ ಆಗುವ ನಿರೀಕ್ಷೆ ಇದೆ. ಮುಂಗಾರು ಪೂರ್ವ ಬಿತ್ತನೆ ಆಗಿರುವ ಉದ್ದು ಮತ್ತು ಹೆಸರು ಕಟಾವಿಗೆ ಬಂದಿದೆ. ಮಳೆಯಿಂದ 81,589 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು. ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿವಿಧ ಏತ ನೀರಾವರಿ ಯೋಜನೆಗಳಡಿ ಎಲ್ಲೆಲ್ಲಿ ಅವಕಾಶವಿದೆಯೋ ಅಲ್ಲೆಲ್ಲ ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಆ ಮೂಲಕ ಅಂತರ್ಜಲ ಮಟ್ಟ, ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗುವುದು ಎಂದು ಸೂಚಿಸಿದರು.

ರಾಜ್ಯದ ಜಲಾಶಯಗಳು ಒಟ್ಟು ಶೇ. 89ರಷ್ಟು ಭರ್ತಿ ಆಗಿವೆ. ಈ ಹಿನ್ನೆಲೆಯಲ್ಲಿ ಕೆರೆಗಳನ್ನು ತುಂಬಿಸುವಂತೆ ಹಾಗೂ ಮಳೆ ಮುನ್ಸೂಚನೆ ಆಧರಿಸಿ, ಮುಂಚಿತವಾಗಿಯೇ ಸೂಕ್ತ ಪ್ರಮಾಣದ ನೀರನ್ನು ಜಲಾಶಗಳಿಂದ ಹೊರಗೆ ಬಿಡುವ ಮೂಲಕ, ಮಳೆಯಾದಾಗ ಜಲಾಶಯಗಳಲ್ಲಿ ಏಕಾಏಕಿ ನೀರಿನ ಸಂಗ್ರಹ ಹೆಚ್ಚಾಗಿ ಪ್ರವಾಹ ಉಂಟಾಗುವುದನ್ನು ತಡೆಗಟ್ಟಲು ಸೂಚಿಸಿದರು. ಈ ಕುರಿತು ಸರ್ಕಾರದಲ್ಲಿ ಸಂಬಂಧಿಸಿದ ಎಲ್ಲ ಇಲಾಖೆಗಳ ನಡುವೆ ಸಮನ್ವಯ ಇರಬೇಕು ಎಂದು ಸೂಚಿಸಿದರು.

ಸೇತುವೆಗಳ ಫಿಟ್‌ನೆಸ್‌ಗಳ ಬಗ್ಗೆ ವರದಿಯನ್ನು ಲೋಕೋಪಯೋಗಿ ಇಲಾಖೆಯಿಂದ ಪಡೆಯಬೇಕು. ಸಂಪರ್ಕ ರಸ್ತೆಗಳು ಕುಸಿದಿದ್ದರೆ ಅವುಗಳನ್ನು ಸರಿಪಡಿಸಿ, ವಾಹನ ಸಂಚಾರಕ್ಕೆ ಸುಗಮಗೊಳಿಸಬೇಕು. ಎಲ್ಲಾ ಸೇತುವೆ, ರಸ್ತೆಗಳನ್ನು ನಿರಂತರವಾಗಿ ಪರಿಶೀಲನೆ ನಡೆಸಿ ಯಾವುದೇ ಅನಾಹುತವಾಗದಂತೆ ಎಚ್ಚರಿಕೆ ವಹಿಸಬೇಕು. ಮುಳುಗು ಸೇತುವೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಬೇಕು. ಯಾವುದೇ ಕಾರಣಕ್ಕೂ ವಾಹನ ಸಂಚರಿಸದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಒಟ್ಟು 67 ಸಾವು ಸಂಭವಿಸಿದ್ದು, 66 ಪ್ರಕರಣಗಳಲ್ಲಿ 329 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಅಂಗನವಾಡಿ, ಶಾಲೆ ಕಟ್ಟಡಗಳ, ಸೇತುವೆಗಳು, ಕರೆಗಳು ಸುಸ್ಥಿತಿಯಲ್ಲಿರುವ ಬಗ್ಗೆ ಖಾತರಿಪಡಿಸಿಕೊಳ್ಳಲು ಸೂಚಿಸಲಾಗಿದೆ.

ಮಲೆನಾಡು, ಕರಾವಳಿ ಭಾಗಗಳಲ್ಲಿ ಇರುವ ಹಳೇ ಶಾಲಾ ಕಟ್ಟಡಗಳನ್ನು ಗುರುತಿಸಿ, ಕ್ರಿಯಾ ಯೋಜನೆಯಲ್ಲಿ ಆದ್ಯತೆ ಮೇರೆಗೆ ದುರಸ್ತಿ ಪಡಿಸಬೇಕು. ಪಂಚಾಯತ್‌ ಮಟ್ಟದಲ್ಲಿ ಟಾಸ್ಕ್‌ ಫೋರ್ಸ್‌ ರಚಿಸಸಲಾಗಿದೆ. 20 ಸಾವಿರ ರೂ. ಅನುದಾನ ಒದಗಿಸಲಾಗಿದೆ. ಸಾವು ನೋವು ತಪ್ಪಿಸುವುದು ನಮ್ಮ ಆದ್ಯತೆ. ಗ್ರಾಮ ಪಂಚಾಯತ್‌ ಟಾಸ್ಕ್‌ ಫೋರ್ಸ್‌ ಬಲಪಡಿಸಲು ಕ್ರಮ ಕೈಗೊಳ್ಳಬೇಕು. ಮನೆ ಕುಸಿತ, ನೀರಿನಲ್ಲಿ ಕೊಚ್ಚಿ ಹೋಗುವಂತಹ ಪ್ರಕರಣಗಳಲ್ಲಿ ಸಾವು ನೋವು ತಪ್ಪಿಸಲು ಸಾಧ್ಯವಿದೆ. ಶಿಥಿಲವಾದ ಮನೆಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಗ್ರಾಮಮಟ್ಟದಲ್ಲಿ ಮೊದಲೇ ಗುರುತಿಸಬೇಕು ಎಂದು ತಾಕೀತು ಮಾಡಿದರು.

ಒಟ್ಟು 1,283 ಮನೆಗಳು ಶೇ. 75ಕ್ಕಿಂತ ಹೆಚ್ಚು ಹಾನಿಗೊಳಗಾಗಿದೆ. ಅದರಲ್ಲಿ 879 ಪ್ರಕರಣಗಳಲ್ಲಿ ತಲಾ 1.20 ಲಕ್ಷ ರೂ. ನಂತೆ 10.54 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಇದರೊಂದಿಗೆ ದೇವರಾಜ ಅರಸು ವಸತಿ ಯೋಜನೆಯಡಿ ಮನೆ ಮಂಜೂರು ಮಾಡಲಾಗುವುದು. ಈಗಾಗಲೇ 500 ಮನೆ ಮಂಜೂರು ಮಾಡಲಾಗಿದೆ. 2,817 ಕುಟುಂಬಗಳಿಗೆ ಬಟ್ಟೆ ಬರೆ ಹಾನಿಗಾಗಿ 2,500 ರೂ. ನಂತೆ ಹಾಗೂ 2,811 ಕುಟುಂಬಗಳಿಗೆ ಗೃಹೋಪಯೋಗಿ ಸಾಮಗ್ರಿಗಳ ಹಾನಿಗೆ ತಲಾ 2,500 ರಂತೆ ಒಟ್ಟು 1.40 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ರಾಜ್ಯದಲ್ಲಿ ಮನೆ ಕುಸಿದು 29 ಸಾವು ಸಂಭವಿಸಿದ್ದು, ನಗರ ಮತ್ತು ಗ್ರಾಮ ಪ್ರದೇಶಗಳಲ್ಲಿ ಶಿಥಿಲಗೊಂಡ ಮನೆಗಳಲ್ಲಿರುವವರನ್ನು ಖಾಲಿ ಮಾಡಿ ಅವರಿಗೆ ಪುನರ್ವಸತಿ ಕಲ್ಪಿಸಬೇಕು ಎಂದರು.

ಪ್ರವಾಹ ಇರುವಾಗ ನೀರಿಗೆ ಇಳಿಯಲು ಬಿಡಬಾರದು, ಪೊಲೀಸರ ಸಹಕಾರದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯತ್‌, ಕಂದಾಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಈ ನಿಟ್ಟಿನಲ್ಲಿ ಮುಂಜಾಗರೂಕತೆ ಕ್ರಮಗಳನ್ನು ಕೈಗೊಳ್ಳಬೇಕು. ಬೆಂಗಳೂರು ನಗರದಲ್ಲಿ ಕಂಟ್ರೋಲ್‌ ರೂಂ ಗಳನ್ನು ಗುರುತಿಸಲಾಗಿದೆ. ದೊಡ್ಡ ಚರಂಡಿಗಳು ಓಪನ್‌ ಇರುವ ಸ್ಥಳಗಳನ್ನು ಗುರುತಿಸಿ ಮೊದಲೇ ಬಂದೋಬಸ್ತ್‌ ಮಾಡಲಾಗಿದೆ. ಇದರಿಂದ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ. ರಾಜಕಾಲುವೆಗಳ ಒತ್ತುವರಿ ತೆರವು ಮಾಡಬೇಕು ಎಂದು ಸೂಚಿಸಲಾಯಿತು. ಕೋಡಿಗೆ ಗೇಟ್‌ ಅಳವಡಿಸುವ ಮೂಲಕ, ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ನಿಯಂತ್ರಿಸಿ ಪ್ರವಾಹ ತಡೆಗಟ್ಟಲು ಸೂಚಿಸಿದರು.

ಬೆಂಗಳೂರಲ್ಲಿ ಕಟ್ಟೆಚ್ಚರ ವಹಿಸಿ:ಬೆಂಗಳೂರಿನಲ್ಲಿ ಅಧಿಕಾರಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಪ್ರತಿದಿನ ನಗರದ ಪರಿಸ್ಥಿತಿ ಕುರಿತು ಸಭೆ ನಡೆಸಿ ಪರಿಶೀಲಿಸಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಲಾಗಿದೆ. ವಲಯ ಆಯುಕ್ತರ ಸಭೆ ನಡೆಸಿ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹಾಗೂ ಎಂಜಿನಿಯರುಗಳಿಗೆ ಜವಾಬ್ದಾರಿ ನಿಗದಿ ಪಡಿಸಿ. ಕರ್ತವ್ಯಲೋಪ ಎಸಗಿದರೆ, ಮುಲಾಜಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಸಂಸ್ಥೆಗಳಾದ ಬಿಡಿಎ, ಬಿಡಬ್ಲ್ಯುಎಸ್​ಎಸ್​ಬಿ, ಬಿಎಂಆರ್​ಸಿಎಲ್​, ಬಿಬಿಎಂಪಿ ಮೊದಲಾದವುಗಳ ನಡುವೆ ಸಮನ್ವಯ ವಹಿಸಲು ಸೂಚಿಸಲಾಯಿತು.

ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಅಧೀನದಲ್ಲಿರುವ ಅಧಿಕಾರಿಗಳು ಎಚ್ಚರಿಕೆಯಿಂದ ಇರಲು ಸೂಚಿಸಬೇಕು. ನಗರ ಮತ್ತು ಪಟ್ಟಣಗಳಲ್ಲಿ ಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಚರಂಡಿಗಳ ಸ್ವಚ್ಚತೆಯನ್ನು ನಿರಂತರವಾಗಿ ಮಾಡಬೇಕು. 210 ಕೋಟಿ ರೂ. ರಾಜ್ಯ ಹೆದ್ದಾರಿಗಳ ದುರಸ್ತಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಪ್ರವಾಹ ಸಂದರ್ಭದಲ್ಲಿ ಉದ್ಭವವಾಗಬಹುದಾದ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಡೆಂಗ್ಯು ಪ್ರಕರಣಗಳಲ್ಲಿ ಇಳಿಕೆಯಾಗಿದೆ. ಚಿಕುನ್‌ಗುನ್ಯಾ, ಮಲೇರಿಯಾ ರೋಗ ಹರಡದಂತೆ ಕೂಡ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಪ್ರವಾಹ, ಭಾರಿ ಮಳೆ ಸಂದರ್ಭದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡರೆ, ಕೂಡಲೇ ಸರಿಪಡಿಸಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಯಿತು. ಅಗತ್ಯವಿರುವ ಟ್ರಾನ್ಸ್‌ಫಾರ್ಮರ್‌ಗಳು, ಕಂಬಗಳನ್ನು ಲಭ್ಯಗೊಳಿಸಲು ಸೂಚಿಸಲಾಯಿತು. ಒಟ್ಟಾರೆಯಾಗಿ ಎಲ್ಲ ಇಲಾಖೆಗಳೂ ಕಟ್ಟೆಚ್ಚರದಿಂದ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ:ರಾಜ್ಯದಲ್ಲಿ ಮುಂಗಾರು ಮಳೆ ಸಕ್ರಿಯ: 5 ದಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Alert

ABOUT THE AUTHOR

...view details