ಬೆಂಗಳೂರು:ರಾಜ್ಯದ ಕರಾವಳಿ ಭಾಗದಲ್ಲಿ ಕಳೆದ ವಾರದಿಂದ ಭರ್ಜರಿ ಮಳೆಯಾಗುತ್ತಿದೆ. ಇನ್ನಷ್ಟು ವರ್ಷಧಾರೆ ಸುರಿಯುವ ಸಂಭವ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಇಂದು ಮಧ್ಯಾಹ್ನದಿಂದ ನಾಳೆ ಬೆಳಗ್ಗೆಯವರೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇನ್ನು ಅದೇ ಜಿಲ್ಲೆಗಳಿಗೆ ಜುಲೈ 9 ಮತ್ತು 12ರಂದು ಆರೆಂಜ್ ಅಲರ್ಟ್, ಜುಲೈ 10 ಮತ್ತು 11ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆಯಲ್ಲಿ ಇಂದು, ಬೆಳಗಾವಿ ಜಿಲ್ಲೆಗೆ ಇಂದು ಮತ್ತು ಜುಲೈ 12ರಂದು, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಇಂದು, ನಾಳೆ ಮತ್ತು ಜುಲೈ 11ರಂದು, ಯಾದಗಿರಿ ಜಿಲ್ಲೆಗೆ ಇಂದು ಮತ್ತು ಜುಲೈ 11ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರಕ್ಕೆ ನಾಳೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ಇಂದು ಆರೆಂಜ್ ಮತ್ತು ನಾಳೆ, ಜುಲೈ 11, 12ರಂದು ಯೆಲ್ಲೋ ಅಲರ್ಟ್, ಹಾಸನ ಜಿಲ್ಲೆಗೆ ಇಂದು ಮತ್ತು ಜುಲೈ 12ರಂದು ಯೆಲ್ಲೋ ಅಲರ್ಟ್ ಇದೆ.
ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ನಿರಂತರವಾಗಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಹಾಸನ ಜಿಲ್ಲೆಯಲ್ಲಿಯೂ ಸಹ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.