ಬೆಂಗಳೂರು:ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪದಲ್ಲಿ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 26ಕ್ಕೆ ಮುಂದೂಡಿದೆ.
ಎಫ್ಐಆರ್ ರದ್ದು ಕೋರಿ ಪ್ರಕರಣದ ಮೊದಲನೇ ಆರೋಪಿಯಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ರೇವಣ್ಣ ಪರ ವಕೀಲರು ಹಾಜರಾಗಿ, ''ಅರ್ಜಿಯಲ್ಲಿ ಕೆಲ ತಿದ್ದುಪಡಿ ಮಾಡಬೇಕಿದೆ. ಅದಕ್ಕಾಗಿ ಒಂದು ವಾರ ಕಾಲಾವಕಾಶ ನೀಡಬೇಕೆಂದು'' ಮನವಿ ಮಾಡಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ''ಅರ್ಜಿದಾರರ ಪರ ವಕೀಲರ ಮನವಿಯ ಮೇರೆಗೆ ಅರ್ಜಿ ವಿಚಾರಣೆ ಮುಂದೂಡಲಾಗುತ್ತಿದೆ'' ಎಂದು ತಿಳಿಸಿ, ಅರ್ಜಿಯನ್ನು ಸೆಪ್ಟೆಂಬರ್ 26ರಂದು ವಿಚಾರಣೆಗೆ ನಿಗದಿಪಡಿಸಿತು.
ಅತ್ಯಾಚಾರ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಲ್ಲಿ 2024ರ ಮೇ 2ರಂದು ಕೆ.ಆರ್.ನಗರ ಪೊಲೀಸರು ಹೆಚ್.ಡಿ.ರೇವಣ್ಣ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದನ್ನು ರದ್ದು ಮಾಡುವಂತೆ ಕೋರಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ:ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ಸೆ.27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ - Yediyurappa POCSO Case