ಕರ್ನಾಟಕ

karnataka

ETV Bharat / state

ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ಸೆ.27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ - Yediyurappa POCSO Case

ಪೋಕ್ಸೋ ಕಾಯ್ದೆ ಅಡಿ ದಾಖಲಾದ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ.

yediyurappa
ಬಿ.ಎಸ್.ಯಡಿಯೂರಪ್ಪ (Etv Bharat)

By ETV Bharat Karnataka Team

Published : Sep 19, 2024, 8:42 PM IST

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 27ಕ್ಕೆ ಮುಂದೂಡಿತು.

ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆ ವೇಳೆ, ''ಪ್ರಕರಣದ ವಿಚಾರಣೆ ನಡೆಸಲು ಹೆಚ್ಚಿನ ಸಮಯ ಬೇಕಾಗುತ್ತದೆ. ಇಂದು ಸಾಕಷ್ಟು ಪ್ರಕರಣಗಳಿವೆ. ಆದ್ದರಿಂದ, ಈ ಪ್ರಕರಣವನ್ನು ಮತ್ತೊಂದು ದಿನ ವಿಚಾರಣೆಗೆ ನಿಗದಿಪಡಿಸೋಣ'' ಎಂದು ಯಡಿಯೂರಪ್ಪ ಹಾಗೂ ಸಿಐಡಿ ಪರ ವಕೀಲರಿಗೆ ನ್ಯಾಯಪೀಠ ಹೇಳಿತು.

ಯಡಿಯೂರಪ್ಪ ಪರವಾಗಿ ಹಾಜರಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್, ''ಮುಂದಿನ ಗುರುವಾರ ಅಥವಾ ಶುಕ್ರವಾರ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸುವಂತೆ'' ಮನವಿ ಮಾಡಿದರು.

ಸಿಐಡಿ ಪರ ವಕೀಲರ ವಾದವೇನು?: ಸಿಐಡಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್, ''ಪ್ರಕರಣವನ್ನು ಯಾವಾಗ ವಿಚಾರಣೆಗೆ ನಿಗದಿಪಡಿಸಿದರೂ ವಾದ ಮಂಡಿಸಲು ಸಿದ್ಧವಿದ್ದೇನೆ. ಆದರೆ, ಪೋಕ್ಸೋ ಕಾಯ್ದೆಯ ಸೆಕ್ಷನ್ 35ರ ಪ್ರಕಾರ, ಪ್ರಕರಣದ ಸಂಜ್ಞೇ (ಕಾಗ್ನಿಜೆನ್ಸ್) ಪರಿಗಣಿಸಿದ 30 ದಿನಗಳ ಒಳಗೆ ಸಂತ್ರಸ್ತ ಮಗುವಿನ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ. ಆದ್ದರಿಂದ, ನ್ಯಾಯಾಲಯ ಈ‌ ಹಿಂದೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು'' ಎಂದು ಕೋರಿದರು.

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ''ಪ್ರಕರಣ ಸಂಬಂಧ ವಿಚಾರಣೆ ನಡೆಸಿ, ಶೀಘ್ರ ಇತ್ಯರ್ಥಪಡಿಸಲಾಗುವುದು. ಮುಂದಿನ ಶುಕ್ರವಾರ ಅರ್ಜಿ ವಿಚಾರಣೆ ನಡೆಸೋಣ'' ಎಂದು ತಿಳಿಸಿ, ಸೆಪ್ಟೆಂಬರ್ 27ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿತು.

ಅಲ್ಲಿಯವರೆಗೆ, ಯಡಿಯೂರಪ್ಪ ಅವರನ್ನು ಬಂಧಿಸದಂತೆ ಮತ್ತು ಅವರಿಗೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶ ಮುಂದುವರೆಯಲಿದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಇದನ್ನೂ ಓದಿ:ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರು - Munirathna Gets Bail

ABOUT THE AUTHOR

...view details