ಬೆಂಗಳೂರು: ಪರವಾನಿಗೆ ಪಡೆಯದೆ ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಹಾಗೂ ಸ್ಪೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯೋರ್ವನನ್ನು ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಆರೋಪ ಸಂಬಂಧ, ತಮ್ಮನ್ನು ಪ್ರಕರಣದಿಂದ ಕೈ ಬಿಡಲು ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಹೈಕೋರ್ಟ್ ಸೂಚಿಸಿದೆ.
ಬೆಳ್ತಂಗಡಿ ಠಾಣಾ ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್ಐಆರ್ಗಳನ್ನು ರದ್ದುಪಡಿಸುವಂತೆ ಕೋರಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠವು ಈ ಸೂಚನೆ ನೀಡಿ ಅರ್ಜಿಗಳನ್ನು ಇತ್ಯರ್ಥಪಡಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣ ಸಂಬಂಧ ಶಾಸಕ ಪೂಂಜಾ ವಿರುದ್ಧ ಈಗಾಗಲೇ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ಕೋರ್ಟ್) ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಈ ಅಂಶ ದಾಖಲಿಸಿಕೊಂಡ ಪೀಠ ಈ ಸೂಚನೆ ನೀಡಿ ಆದೇಶಿಸಿದೆ. ದೋಷಾರೋಪ ಪಟ್ಟಿ ಸಲ್ಲಿಸಿರುವುದರಿಂದ ಆರೋಪಗಳನ್ನು ಕೈ ಬಿಡಲು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿದಾರರು ಅರ್ಜಿ ಸಲ್ಲಿಸಲಿ. ನ್ಯಾಯಾಲಯವು ಎಂಟು ವಾರಗಳಲ್ಲಿ ಆ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಮಾನ ಕೈಗೊಳ್ಳಬೇಕು. ಅಲ್ಲಿಯವರೆಗೆ ವಿಚಾರಣೆಗೆ ಹಾಜರಾಗುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಬಾರದು ಎಂದು ಸೂಚಿಸಿದ ನ್ಯಾಯಪೀಠ ಅರ್ಜಿಗಳನ್ನು ಇತ್ಯರ್ಥಪಡಿಸಿತು.