ಬೆಂಗಳೂರು: ಬೆಳಗಾವಿಯಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ವಿರೋಧಿಸಿ ಕರಾಳ ದಿನ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಹೈಕೋರ್ಟ್ ಸೂಚನೆ ನೀಡಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಮಲ್ಲಪ್ಪ ಚಾಯಪ್ಪ ಅಕ್ಷರದ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್.ಪಿ. ಅಮೃತೇಶ್, ರಾಜ್ಯದಲ್ಲಿ ಪ್ರತಿ ವರ್ಷ ನವಂಬರ್ 1ರಂದು ಆಚರಿಸುವ ಕನ್ನಡ ರಾಜ್ಯೋತ್ಸವವು ಕರ್ನಾಟಕ ಹಾಗೂ ಕನ್ನಡಿಗರ ಹೃದಯ ಮತ್ತು ಆತ್ಮದೊಂದಿಗೆ ಬೆಸೆದುಕೊಂಡಿದೆ. ಆದರೆ, ಗಡಿ ವಿವಾದ ಇರುವ ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯು ರಾಜ್ಯೋತ್ಸವದ ದಿನದಂದೇ ಕರಾಳ ದಿನ ಆಚರಿಸಿಕೊಂಡು ಬರುತ್ತಿದೆ. ಮೇಲಾಗಿ ಕರಾಳ ದಿನ ಆಚರಿಸಲು ರಾಜ್ಯ ಪೊಲೀಸರೇ ಭದ್ರತೆ ಒದಗಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಎಲ್ಲ ಪ್ರತಿವಾದಿಗಳಿಗೆ ನೋಟಿಸ್:ಕರಾಳ ದಿನ ಆಚರಣೆ ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಈ ಪಿಐಎಲ್ ಸಂಬಂಧ ಹೈಕೋರ್ಟ್ ಅಕ್ಟೋಬರ್ 30ರಂದು ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ. ಅದಾದ ನಂತರವೂ 2024ರ ನವಂಬರ್ 1ರಂದು ಮತ್ತೆ ಕರಾಳ ದಿನ ಆಚರಿಸಿ, ಮೆರವಣಿಗೆ ನಡೆಸಲಾಗಿದೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಹಾಗೂ ಮರಾಠಿ ಪತ್ರಿಕೆಗಳ ವರದಿಗಳನ್ನೊಳಗೊಂಡ ಮೆಮೊ ಅನ್ನು ನವಂಬರ್ 5ರಂದು ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ಎಂದು ಪೀಠಕ್ಕೆ ವಿವರಿಸಿದರು.