ಕರ್ನಾಟಕ

karnataka

ETV Bharat / state

ಡಿಕೆಶಿ ಪ್ರಕರಣ: ಸಿಬಿಐ, ಯತ್ನಾಳ್ ಅರ್ಜಿಗಳ ಒಟ್ಟಾಗಿ ವಿಚಾರಣೆ ನಡೆಸಲು ಹೈಕೋರ್ಟ್ ನಿರ್ಧಾರ

ಡಿಕೆಶಿ ಪ್ರಕರಣದ ವಿಚಾರಣೆಯನ್ನು ಮಾರ್ಚ್​ 22ಕ್ಕೆ ಮುಂದೂಡಿದ ಹೈಕೋರ್ಟ್,​ ಎರಡೂ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸಲು ನಿರ್ಧರಿಸಿದೆ.

High Court
ಹೈಕೋರ್ಟ್​

By ETV Bharat Karnataka Team

Published : Feb 29, 2024, 5:27 PM IST

ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ನೀಡಿ ಆದೇಶಿಸಿದ್ದ ಕ್ರಮ ಪ್ರಶ್ನಿಸಿ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿದ್ದ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸಲು ಹೈಕೋರ್ಟ್ ತೀರ್ಮಾನಿಸಿತು.

ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ.ಅಡಿಗ ಅವರಿದ್ದ ನ್ಯಾಯಪೀಠ ಅರ್ಜಿಗಳ ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ, ಸಿಬಿಐ ಪರ ವಾದ ಮಂಡಿಸಿದ್ದ ಸಹಾಯಕ ಸಾಲಿಸಿಟರ್ ಜನರಲ್ ರಾಜು, ರಾಜ್ಯ ಸರ್ಕಾರದ ನಿರ್ಧಾರದಿಂದ ತನಿಖೆ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಅನುಮತಿ ನೀಡಿದ್ದ ಆದೇಶ ಹಿಂಪಡೆದಿರುವ ಸರ್ಕಾರದ ಆದೇಶ ಕಾನೂನುಬಾಹಿರ. ಆದ್ದರಿಂದ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು.

ಬಸನಗೌಡ ಪಾಟೀಲ್ ಯತ್ನಾಳ್ ಪರ ವಕೀಲರು, ಅರ್ಜಿಯಲ್ಲಿ ಕೆಲ ತಿದ್ದುಪಡಿಗಳನ್ನು ಮಾಡಬೇಕಾಗಿದೆ. ಇದಕ್ಕಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ವೇಳೆ ಸಿಬಿಐ ಪರ ವಕೀಲರು, ಸರ್ಕಾರದ ನಿರ್ಧಾರ ತನಿಖೆಗೆ ಅಡ್ಡಿಯಾಗುತ್ತಿದ್ದು, ಶೀಘ್ರ ವಿಚಾರಣೆ ಕೈಗೆತ್ತಿಕೊಳ್ಳಲು ಮನವಿ ಮಾಡಿದರು.

ಇಬ್ಬರೂ ವಕೀಲರ ವಾದಗಳನ್ನು ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಮಾರ್ಚ್ 22ಕ್ಕೆ ನಿಗದಿಪಡಿಸಿದ್ದು, ಎರಡೂ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಡಿ.ಕೆ.ಶಿವಕುಮಾರ್ ಅವರು ಗಣಿಗಾರಕೆ ಮತ್ತು ರಿಯಲ್ ಎಸ್ಟೇಟ್‌ ಉದ್ಯಮ ಸರಿದಂತೆ ಹಲವು ವ್ಯವಹಾರಗಳಲ್ಲಿ ತೊಡಗಿಕೊಂಡಿದ್ದು, ದೆಹಲಿ ಹಾಗು ವಿವಿಧೆಡೆ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆದಿತ್ತು. ಈ ವೇಳೆ 8.59 ಕೋಟಿ ರೂಪಾಯಿಗಳ ಹಣ ಪತ್ತೆಯಾಗಿತ್ತು. ಡಿ.ಕೆ.ಶಿವಕುಮಾರ್ ಅವರಿಗೆ ಸೇರಿದ ಸ್ಥಳವೊಂದರಲ್ಲಿ 41 ಲಕ್ಷ ರೂಪಾಯಿ ದೊರೆತಿತ್ತು. ಇದರ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.

ಬಳಿಕ ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಇದನ್ನು ಆಧರಿಸಿ 2019ರ ಸೆಪ್ಟೆಂಬರ್ 3ರಂದು ಡಿಕೆಶಿ ಅವರನ್ನು ಬಂಧಿಸಲಾಗಿತ್ತು. ಆ ನಂತರ 2019ರ ಸೆಪ್ಟೆಂಬರ್ 9ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ, ಭ್ರಷ್ಟಾಚಾರ ನಿಗ್ರಹ ಕಾಯಿದೆ ಅಡಿ ತನಿಖೆ ನಡೆಸಲು ಸಿಬಿಐ ರಾಜ್ಯ ಸರ್ಕಾರ ಅನುಮತಿ ನೀಡಿತ್ತು.

ಇದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು.‌ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣಾ ಹಂತದಲ್ಲಿರುವ ಸಂದರ್ಭದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸಿಬಿಐಗೆ ನೀಡಿದ್ದ ಅನುಮತಿ ರದ್ದುಪಡಿಸಿ ಆದೇಶಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಿತ್ತು.

ಇದನ್ನೂ ಓದಿ:ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಪ್ರಕರಣ: ವಿಚಾರಣೆ ಫೆ. 29ಕ್ಕೆ ಮುಂದೂಡಿದ ಹೈಕೋರ್ಟ್

ABOUT THE AUTHOR

...view details