ಕರ್ನಾಟಕ

karnataka

ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷರ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಣೆ - High Court

By ETV Bharat Karnataka Team

Published : Mar 28, 2024, 7:34 AM IST

ಎಂಬಿಬಿಎಸ್ ವಿದ್ಯಾರ್ಥಿನಿಯಿಂದ ಕಾಲೇಜು ಅಭಿವೃದ್ಧಿ ಶುಲ್ಕವೆಂದು ಹಣ ಪಡೆದು ವಂಚಿಸಿದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿತು.

Etv Bharat high ocurt
ಹೈಕೋರ್ಟ್

ಬೆಂಗಳೂರು:ಕಾಲೇಜು ಅಭಿವೃದ್ಧಿ ಶುಲ್ಕ ಎಂಬುದಾಗಿ ವಿದ್ಯಾರ್ಥಿನಿಯಿಂದ ಹಣ ಸಂಗ್ರಹಿಸಿ ದುರುಪಯೋಗಪಡಿಸಿಕೊಂಡು ವಂಚನೆ ಹಾಗೂ ನಂಬಿಕೆ ದ್ರೋಹ ಎಸಗಿದ ಆರೋಪದ ಮೇಲೆ ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಾ.ಅಪ್ಪಾಜಿ ಗೌಡ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಅಪ್ಪಾಜಿ ಗೌಡ ತಮ್ಮ ವಿರುದ್ಧದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಜಾಗೊಳಿಸಿ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಆದೇಶಿಸಿತು.

ಅರ್ಜಿದಾರರು ಸೇರಿದಂತೆ ಪ್ರಕರಣದ ಇತರೆ ಆರೋಪಿಗಳು ಒಕ್ಕಲಿಗರ ಸಂಘದ ಮಾಜಿ ಪದಾಧಿಕಾರಿಗಳಾಗಿದ್ದಾರೆ. ವಿದ್ಯಾರ್ಥಿನಿಯಿಂದ ಕಾಲೇಜು ಅಭಿವೃದ್ಧಿ ಶುಲ್ಕ ಸಂಗ್ರಹಿಸಿ, ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಕಾಲೇಜು ನಡೆಸುತ್ತಿರುವ ಸಂಘಕ್ಕೆ ಪಾವತಿಸಿಲ್ಲ ಎಂಬುದು ಅರ್ಜಿದಾರರ ಮೇಲಿನ ಆರೋಪ. ದೂರು ಪರಿಶೀಲಿಸಿದಾಗ ಅರ್ಜಿದಾರರ ಮೇಲಿನ ಆರೋಪಗಳಲ್ಲಿ ಹುರುಳಿಲ್ಲ ಎಂದು ಮೇಲ್ನೋಟಕ್ಕೆ ಹೇಳಲು ಸಾಧ್ಯವಿಲ್ಲ. ಮೇಲಾಗಿ ವಿದ್ಯಾರ್ಥಿನಿಯಿಂದ ಸಂಗ್ರಹಿಸಿದ ಹಣವನ್ನು ಜೇಬಿಗಿಳಿಸಿ ನಂಬಿಕೆ ದ್ರೋಹ ಹಾಗೂ ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪೊಲೀಸರು ಸಹ ಈಗಾಗಲೇ ತನಿಖೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ವಿಚಾರಣಾ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಬೇಕಿದೆ. ಆದ್ದರಿಂದ ಅರ್ಜಿದಾರರ ಮೇಲಿನ ದೂರು ರದ್ದುಪಡಿಸಲು ಅರ್ಹವಾಗಿಲ್ಲ ಎಂದು ತಿಳಿಸಿ ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ:ನಗರದ ವಿ.ವಿ.ಪುರಂ ಠಾಣೆಯಲ್ಲಿ ಒಕ್ಕಲಿಗರ ಸಂಘದ ಮುಖ್ಯ ಕಾರ್ಯಕಾರಿ ಅಧಿಕಾರಿಯಾಗಿದ್ದ ಡಾ.ಸಿದ್ದರಾಮಯ್ಯ ಎಂಬವರು 2021ರ ಅ.11ರಂದು ರಾಜ್ಯ ಒಕ್ಕಲಿಗರ ಸಂಘದ ಮಾಜಿ ಮುಖ್ಯಸ್ಥರು, ಅಧ್ಯಕ್ಷರ ವಿರುದ್ಧ ದೂರು ಸಲ್ಲಿಸಿದ್ದರು. ಪ್ರಕರಣದಲ್ಲಿ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅಪ್ಪಾಜಿ ಗೌಡ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದರು.

ಒಕ್ಕಲಿಗರ ಸಂಘದ ಒಡೆತನದ ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸಾಕ್ಷಿ ಎಂಬ ವಿದ್ಯಾರ್ಥಿನಿ ಎಂಬಿಬಿಎಸ್ ಕೋರ್ಸ್​​ಗೆ ದಾಖಲಾಗಿದ್ದರು. ಇವರಿಂದ ಆರೋಪಿಗಳು ಅಭಿವೃದ್ಧಿ ಶುಲ್ಕವೆಂದು 50 ಲಕ್ಷ ಹಣ ಪಡೆದುಕೊಂಡು, ದುರುಪಯೋಗ ಪಡಿಸಿಕೊಂಡಿದ್ದರು. ನಂತರ ಅಭಿವೃದ್ಧಿ ಶುಲ್ಕ ಪಾವತಿಸಿಲ್ಲ ಎಂದು ಹೇಳಿ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಸಂಘ ಅನುಮತಿ ನೀಡಿರಲಿಲ್ಲ. ಇದರಿಂದ ವಿದ್ಯಾರ್ಥಿನಿ ಪರ ಅರ್ಜಿದಾರರು ಸಂಘವನ್ನು ಸಂಪರ್ಕಿಸಿ ಎನ್‌ಒಸಿ ನೀಡುವ ಮೂಲಕ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲು ಕೋರಿದ್ದರು. 30 ಲಕ್ಷ ಮೊತ್ತಕ್ಕೆ ಚೆಕ್ ನೀಡಿದ್ದರು. ಆದರೆ, ಖಾತೆಯಲ್ಲಿ ಹಣವಿಲ್ಲದ ಕಾರಣಕ್ಕೆ ಚೆಕ್ ಬೌನ್ಸ್ ಆಗಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ತನಿಖೆ ನಡೆಸಿದ್ದ ಪೊಲೀಸರು, ನಂಬಿಕೆ ದ್ರೋಹ ಹಾಗೂ ವಂಚನೆ ಆರೋಪ ಸಂಬಂಧ ಅಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿ (ಕಾಗ್ನಿಜೆನ್ಸ್ ತೆಗೆದುಕೊಂಡು) 2022ರ ನ.9ರಂದು ನಗರದ 3ನೇ ಎಸಿಎಂಎ ನ್ಯಾಯಾಲಯ ಆದೇಶಿಸಿತ್ತು. ಇದರಿಂದ ತಮ್ಮ ವಿರುದ್ಧದ ದೂರು ಹಾಗೂ ಅಧೀನ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಅಪ್ಪಾಜಿ ಗೌಡ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

ABOUT THE AUTHOR

...view details