ಕರ್ನಾಟಕ

karnataka

ETV Bharat / state

ರಾಜ್ಯ ಕಟ್ಟಡ, ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿ ವೆಚ್ಚದ ಮೂಲಗಳ ವಿವರ ಸಲ್ಲಿಕೆಗೆ ಹೈಕೋರ್ಟ್ ಸೂಚನೆ - High Court - HIGH COURT

ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯಲ್ಲಿ ಸಂಗ್ರಹವಾಗುವ ಸೆಸ್ ಹಣ ಹಂಚಿಕೆ ಕುರಿತಂತೆ ಸಂಪೂರ್ಣ ವಿವರ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

High Court
ಹೈಕೋರ್ಟ್ (ETV Bharat)

By ETV Bharat Karnataka Team

Published : Jun 27, 2024, 6:49 AM IST

ಬೆಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯಲ್ಲಿ ಸಂಗ್ರಹವಾಗುವ ಸೆಸ್ ಹಣ ಯಾವ, ಯಾವ ಮೂಲಗಳಿಗೆ ಹಂಚಿಕೆಯಾಗಿದೆ ಎಂಬುದರ ಕುರಿತಂತೆ ಸಂಪೂರ್ಣ ವಿವರ ಸಲ್ಲಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮೀಸಲಾದ ವರ್ಗದಲ್ಲಿ ಶೈಕ್ಷಣಿಕ ಧನಸಹಾಯ ಮಾಡಲು ನಿರ್ದೇಶಿಸಬೇಕು ಎಂದು ಕೋರಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಫೆಡರೇಶನ್​ನ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಹಾಗೂ ಇತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಅಲ್ಲದೇ, ಕಾರ್ಮಿಕರ ಕಲ್ಯಾಣ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಖರ್ಚು ಮಾಡಬೇಕೇ ವಿನಃ ಮಂಡಳಿಯ ಅಧಿಕಾರಿಗಳ ವೆಚ್ಚಕ್ಕಲ್ಲ ಎಂದು ನ್ಯಾಯ ಪೀಠ ತಿಳಿಸಿದೆ.

ಅರ್ಜಿದಾರರ ಪರ ವಕೀಲರು, 2019ರ ಸಿಎಜಿ ವರದಿಯ ಪ್ರಕಾರ ಕರ್ನಾಟಕ ಕಟ್ಟಡ ನಿರ್ಮಾಣ ಕಲ್ಯಾಣ ಮಂಡಳಿಯು ತನ್ನ ಆಡಳಿತಾತ್ಮಕ ವೆಚ್ಚವನ್ನು ಕಾನೂನಾತ್ಮಕವಾಗಿ ನಿಗದಿಪಡಿಸಿದ ಶೇ.5ರಷ್ಟನ್ನು ಮೀರಿ ಶೇ.9ರಿಂದ ಶೇ.72ರಷ್ಟು ಹೆಚ್ಚಾಗಿ ಖರ್ಚು ಮಾಡಲಾಗಿದೆ ಎಂದು ಆರೋಪಿಸಿದರು. ಜೊತೆಗೆ ಘಟನೋತ್ತರ ಅನುಮೋದನೆ ಮೂಲಕ ಮಂಡಳಿಯು ಇನ್ನೋವಾ ಕಾರುಗಳನ್ನು ಖರೀದಿಸಿದ್ದು, ಮಂಡಳಿಯ ನಿಧಿಯನ್ನು ಅನಗತ್ಯವಾಗಿ ಖರ್ಚು ಮಾಡಿದೆ. ಹೈಕೋರ್ಟ್‌ನ ಇದೇ ಪೀಠವು ನೀಡಿದ್ದ ಮಧ್ಯಂತರ ಆದೇಶದಂತೆ ಇಬ್ಬರು ವಿದ್ಯಾರ್ಥಿನಿಯರಿಗೆ ಇನ್ನು ಹಣ ಪಾವತಿ ಮಾಡಿಲ್ಲ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ಕಲ್ಯಾಣ ಮಂಡಳಿಯು ಈಗಾಗಲೇ 6 ಲಕ್ಷ ವಿದ್ಯಾರ್ಥಿಗಳಿಗೆ 500 ಕೋಟಿ ರೂಪಾಯಿ ಶೈಕ್ಷಣಿಕ ಸಹಾಯಧನ ವಿತರಿಸಿದೆ. ಕಟ್ಟಡ ಕಾರ್ಮಿಕರಿಗಾಗಿ ಮಂಡಳಿಯ ಮುಖಾಂತರ ಇನ್ನೂ 19 ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ವಿವರಿಸಿದರು. ವಾದ - ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಜುಲೈ 26ಕ್ಕೆ ಮುಂದೂಡಿದೆ.

ಇದನ್ನೂ ಓದಿ:ಪಶು ವೈದ್ಯಕೀಯ ಆಸ್ಪತ್ರೆ ಸ್ಥಳಾಂತರ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್​

ABOUT THE AUTHOR

...view details