ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ: ಭರ್ತಿ ಕುರಿತು ಸರ್ಕಾರದ ಪ್ರತಿಕ್ರಿಯೆಗೆ ಹೈಕೋರ್ಟ್ ಸೂಚನೆ - High court - HIGH COURT

ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಕುರಿತಂತೆ ಮಾಧ್ಯಮಗಳಲ್ಲಿ ವರದಿ ಪರಿಗಣಿಸಿದ ಹೈಕೋರ್ಟ್, ಸ್ವಯಂ ಪ್ರೇರಿತವಾಗಿ ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಈ ಸೂಚನೆ ನೀಡಿದೆ.

High court
ಹೈಕೋರ್ಟ್

By ETV Bharat Karnataka Team

Published : Mar 25, 2024, 9:52 PM IST

ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ 16 ಸಾವಿರಕ್ಕೂ ಅಧಿಕ ವೈದ್ಯಕೀಯ ಸಿಬ್ಬಂದಿ ಕೊರತೆ ಸಂಬಂಧ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ನೀಡುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಕುರಿತಂತೆ ಮಾಧ್ಯಮಗಳಲ್ಲಿ ವರದಿ ಪರಿಗಣಿಸಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

ವಿಚಾರಣೆ ವೇಳೆ ಪ್ರಕರಣದಲ್ಲಿ ಅಮಿಕಸ್ ಕ್ಯೂರಿ(ಹೈಕೋರ್ಟ್‌ಗೆ ನೆರವುಗಾರ) ಆಗಿರುವ ವಕೀಲ ಶ್ರೀಧರ ಪ್ರಭು ವಾದ ಮಂಡಿಸಿ, ರಾಜ್ಯದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ 16,500 ವೈದ್ಯಕೀಯ ಸಿಬ್ಬಂದಿ ಕೊರತೆ ಇದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹುದ್ದೆಗಳು ಖಾಲಿ ಇದ್ದು, ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ ದುರ್ಲಭವಾಗಿದೆ. ಈ ನಡುವೆ ರಾಜ್ಯ ಸರ್ಕಾರ ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆಗೆ ತಿದ್ದುಪಡಿ ತಂದು, ಕಡ್ಡಾಯ ಸೇವೆಗೆ ವಿನಾಯ್ತಿ ನೀಡಿದೆ. ಇದರಿಂದ ಸಮಸ್ಯೆ ಇನ್ನಷ್ಟು ಉಲ್ಬಣಗೊಂಡಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ವೈದ್ಯರ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸಿ ಈ ಹಿಂದೆ ಕಾಯ್ದೆ ತಂದಾಗ ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಸರ್ಕಾರ ಅದನ್ನು ಸಮರ್ಥಿಸಿಕೊಂಡಿತ್ತು. ಸರ್ಕಾರದ ಕ್ರಮವನ್ನು ಏಕ ಸದಸ್ಯ ಪೀಠ ಎತ್ತಿಹಿಡಿದು ವಿವರವಾದ ತೀರ್ಪು ಕೊಟ್ಟಿತ್ತು. ಆದರೆ, ಈಗ ಅದೇ ಕಾಯ್ದೆಗೆ ತಿದ್ದುಪಡಿ ತಂದು ಮಂಜೂರಾತಿ ಹುದ್ದೆಗಳಿಗೆ ಮಾತ್ರ ಗ್ರಾಮೀಣ ಕಡ್ಡಾಯ ಸೇವೆಗೆ ಅವಕಾಶ ನೀಡಲಾಗುವುದು ಎಂದು ಸರ್ಕಾರ ತೀರ್ಮಾನಿಸಿದ್ದು, ಈ ಕುರಿತು ಸ್ಪಷ್ಟತೆ ಇಲ್ಲವಾಗಿದೆ.

ವೈದ್ಯಕೀಯ ಸಿಬ್ಬಂದಿ ಕೊರತೆ ನೀಗಿಸಲು ಪರ್ಯಾಯ ವ್ಯವಸ್ಥೆ ಸರ್ಕಾರದ ಬಳಿ ಇಲ್ಲ. 16 ಸಾವಿರಕ್ಕೂ ಹೆಚ್ಚು ವೈದ್ಯಕೀಯ ಹುದ್ದೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೆನ್ನಲಬು ಆಗಿರುವ ನರ್ಸ್, ಲ್ಯಾಬ್ ಟೆಕ್ನಿಷಿಯನ್, ಡಿ - ಗ್ರೂಪ್ ಹುದ್ದೆಗಳು ದೊಡ್ಡ ಸಂಖ್ಯೆಯಲ್ಲಿ ಖಾಲಿ ಇವೆ. ಇದು ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುತ್ತಿದೆ. ನ್ಯಾಯಾಲಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪೀಠಕ್ಕೆ ವಿವರಿಸಿದರು.

ವಾದ ಆಲಿಸಿದ ನ್ಯಾಯಪೀಠ, ವಕೀಲರು ಪ್ರಸ್ತಾಪಿಸಿದ ವಿಷಯದ ಬಗ್ಗೆ ಪ್ರತಿಕ್ರಿಯೆ ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಜೂನ್ ಮೊದಲ ವಾರಕ್ಕೆ ಮುಂದೂಡಿತು.

ವೈದ್ಯಕೀಯ ಸಿಬ್ಬಂದಿ ಕೊರತೆ:ರಾಜ್ಯದ ಎಲ್ಲ ಜಿಲ್ಲೆಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್ ವೈದ್ಯರು ಸೇರಿದ 16 ಸಾವಿರಕ್ಕೂ ಹೆಚ್ಚು ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ ಡಿ ಗ್ರೂಪ್ ಸಿಬ್ಬಂದಿ ಕೊರತೆಯಿದೆ. ಈ ಬಗ್ಗೆ ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀ’ (ಎಫ್‌ಐಸಿಸಿಐ) ವರದಿ ನೀಡಿದೆ.

ಇದಲ್ಲದೇ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 723 ಎಂಬಿಬಿಎಸ್ ವೈದ್ಯರು, 7,492 ಶುಶ್ರೂಷಕಿಯರು, 1,517 ಲ್ಯಾಬ್ ಟೆಕ್ನಿಷಿಯನ್, 1,512 ಫಾರ್ಮಾಸಿಸ್‌ಟ್‌, 1752 ಸಹಾಯಕರು 3253 ಗ್ರೂಪ್ ಡಿ ನೌಕರರು ಸೇರಿ 16,500ಕ್ಕೂ ಹೆಚ್ಚು ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ, ತಾಂತ್ರಿಕ ಹಾಗೂ ಡಿ. ಗ್ರೂಪ್ ನೌಕರರ ಕೊರತೆ ಇದೆ. ಅಲ್ಲದೇ ರಾಜ್ಯದ ನಗರ ಪ್ರದೇಶಗಳಲ್ಲಿ 245 ಮತ್ತು ಗ್ರಾಮೀಣ ಪ್ರದೇಶದಲ್ಲಿ 209 ಸೇರಿ ಒಟ್ಟು 454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಇದೆ ಎಂದು ವರದಿ ಹೇಳಿತ್ತು. ಈ ವರದಿ ಆಧರಿಸಿ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.

ಇದನ್ನೂಓದಿ:8 ತಿಂಗಳು ಕೆಲಸಕ್ಕೆ ಗೈರು ಹಾಜರಿ: ಉದ್ಯೋಗಿ ವಜಾ ಎತ್ತಿ ಹಿಡಿದ ಹೈಕೋರ್ಟ್ - High Court News

ABOUT THE AUTHOR

...view details