ಬೆಂಗಳೂರು:ಉತ್ತರ ಕನ್ನಡ ಜಿಲ್ಲೆಯ ಹಲವು ಗ್ರಾಮ ಪಂಚಾಯತ್‌ಗಳಲ್ಲಿ ಕಂದಾಯ ಇಲಾಖೆಯ ನೌಕರರನ್ನು ಅನ್ಯ ಕರ್ತವ್ಯಕ್ಕೆ ನಿಯೋಜಿಸಿದ್ದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಭಟ್ಕಳದ ನಾಗರಾಜ್ ಕೃಷ್ಣ ನಾಯ್ಕ ಹಾಗೂ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿತು.
ಅಲ್ಲದೇ, ಸರ್ಕಾರದ ಸುತ್ತೋಲೆಗಳನ್ನು ಜಾರಿಗೊಳಿಸದ ಕ್ರಮ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಗೆ ಅರ್ಹವಿಲ್ಲ ಎಂದು ತಿಳಿಸಿತು.
ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು, "ಸರ್ಕಾರ ಗ್ರಾಮಲೆಕ್ಕಿಗರನ್ನು ಗ್ರಾಮ ಪಂಚಾಯತ್ ಹೊರತಾಗಿ ಬೇರೆಡೆ ಕಾರ್ಯನಿರ್ವಹಿಸಲು ನಿಯೋಜನೆ ಮಾಡುವಂತಿಲ್ಲ ಎಂದು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್‌ಗೆ ಸೂಚಿಸಿ ಸುತ್ತೋಲೆ ಹೊರಡಿಸಿತ್ತು.
ಆದರೆ, ಉತ್ತರ ಕನ್ನಡ ಜಿಲ್ಲೆಯ ಹಲವು ಗ್ರಾಮ ಪಂಚಾಯತ್‌ಗಳಲ್ಲಿ ಕಂದಾಯ ಇಲಾಖೆಯ ನೌಕರರನ್ನು ಅನ್ಯ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತಿದ್ದು, ಇದರಿಂದಾಗಿ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಜನನ-ಮರಣ ಪ್ರಮಾಣ ಪತ್ರ, ಇ-ಖಾತೆ ಪತ್ರ, ಕಂದಾಯ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ಸೇವೆಗಳನ್ನು ಸರಿಯಾದ ಸಮಯಕ್ಕೆ ಒದಗಿಸದೆ ವಿಳಂಬವಾಗಿದೆ. ಅಧಿಕಾರಿಗಳು ಈ ರೀತಿ ವಿಳಂಬ ಪ್ರವೃತ್ತಿ ಪ್ರದರ್ಶಿಸುತ್ತಿರುವುದರಿಂದ ಸಾರ್ವಜನಿಕರು ಅನೇಕ ರೀತಿಯಲ್ಲಿ ಸಂಕಷ್ಟ ಎದುರಿಸಬೇಕಾಗಿದೆ" ಎಂದು ನ್ಯಾಯಪೀಠದ ಗಮನಕ್ಕೆ ತಂದರು.
"ಕೆಲವು ಗ್ರಾಮ ಅಧಿಕಾರಿಗಳನ್ನು ಮತ್ತು ಗ್ರಾಮ ಲೆಕ್ಕಿಗರನ್ನು ತಹಶೀಲ್ದಾರ್ ಕಚೇರಿಗೆ ಕಾರ್ಯನಿರ್ವಹಿಸುವಂತೆ ನಿಯೋಜಿಸಲಾಗಿದೆ ಇದರಿಂದಾಗಿ ಆಡಳಿತಾಂಗ ವ್ಯವಸ್ಥೆ ವಿಳಂಬಗತಿಯಲ್ಲಿ ಸಾಗುತ್ತಿದೆ. ಈ ಬಗ್ಗೆ ಕಂದಾಯ ಇಲಾಖೆಯ ಹಾಗೂ ಕಂದಾಯ ಸಚಿವರ ಗಮನಕ್ಕೂ ಹಲವು ಬಾರಿ ತರಲಾಗಿದೆ ಆದರೆ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಈ ರೀತಿಯಲ್ಲಿ ಕಾನೂನು ಬಾಹಿರವಾಗಿ ನಡೆದುಕೊಂಡವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು" ಎಂದು ಮನವಿ ಮಾಡಿದರು.
ಇದನ್ನೂ ಓದಿ:ವೃಷಭಾವತಿ ನದಿ ಒತ್ತುವರಿ ತೆರವಿಗೆ ಕ್ರಿಯಾ ಸಮಿತಿ ರಚಿಸಲು ಹೈಕೋರ್ಟ್ ನಿರ್ದೇಶನ - High Court