ಕರ್ನಾಟಕ

karnataka

ETV Bharat / state

ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ: ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ - PRAJWAL REVANNA

ಮಹಿಳೆ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

high court
ಪ್ರಜ್ವಲ್ ರೇವಣ್ಣ, ಹೈಕೋರ್ಟ್ (ETV Bharat)

By ETV Bharat Karnataka Team

Published : Nov 22, 2024, 5:52 PM IST

ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪ್ರಕಟಿಸಿತು. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಈ ಹಿಂದೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಹಿಂಪಡೆಯುವುದಾಗಿ ತಿಳಿಸಿದರು. ಈ ಪ್ರಕರಣದಲ್ಲಿ ಆರೋಪ ಪಟ್ಟಿ ನೀಡಲಾಗಿಲ್ಲ ಎಂದರು. ಆಗ ಪೀಠವು, ಹಾಲಿ ಪ್ರಕರಣದಲ್ಲಿ ಆರೋಪ ಪಟ್ಟಿಯನ್ನು ಪರಿಗಣಿಸಿಯೇ ಇಲ್ಲ. ದೂರನ್ನಷ್ಟೇ ಆಧರಿಸಿ, ವಜಾ ಮಾಡಲಾಗಿದೆ ಎಂದು ತಿಳಿಸಿತು.

ಪ್ರಕರಣದ ಹಿನ್ನೆಲೆ:2021ರಲ್ಲಿ ಬಿಸಿಎಂ ಹಾಸ್ಟೆಲ್‌ನಲ್ಲಿ ಬಾಲಕಿಯರಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸುವ ಕುರಿತು ಚರ್ಚಿಸಲು ಪ್ರಜ್ವಲ್ ಅವರ ಕಚೇರಿಗೆ ಸಂತ್ರಸ್ತೆ ತೆರಳಿದ್ದರು. ಬ್ಯುಸಿ ಇರುವುದರಿಂದ ಮಾರನೆಯ ದಿನ ಬರುವಂತೆ ಪ್ರಜ್ವಲ್ ಸೂಚಿಸಿದ್ದರು. ಅದರಂತೆ ಮಾರನೇಯ ದಿನ ಸಂತ್ರಸ್ತೆ ತೆರಳಿದಾಗ ಆಕೆಗೆ ಗನ್ ತೋರಿಸಿ, ಬೆದರಿಸಿ ಅತ್ಯಾಚಾರ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಆನಂತರ ಹಲವು ಬಾರಿ ವಿಡಿಯೋ ಕರೆ ಮಾಡಿ ನಗ್ನವಾಗುವಂತೆ ಸೂಚಿಸಿ, ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಬಹಿರಂಗಪಡಿಸಿದರೆ ಗಂಭೀರ ಕ್ರಮದ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ದೂರಿದ್ದರು.

ಪ್ರಕರಣ ಸಂಬಂಧ ಸಂತ್ರಸ್ತೆಯು 2024ರ ಮೇ 1ರಂದು ವಿಶೇಷ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥರಿಗೆ ದೂರು ನೀಡಿದ್ದರು. ಇದರ ಆಧಾರದಲ್ಲಿ ಬೆಂಗಳೂರಿನ ಸಿಐಡಿಯ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್ ನಿರೀಕ್ಷಣಾ ಜಾಮೀನು ಕೋರಿದ್ದರು.

ಇದನ್ನೂ ಓದಿ:ನಕಲಿ ವಸ್ತು ಹಿಂದಿರುಗಿಸಿ ಅಮೇಜಾನ್‌ಗೆ ₹69 ಲಕ್ಷ ವಂಚನೆ: ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ABOUT THE AUTHOR

...view details