ಬೆಂಗಳೂರು: ಪರವಾನಿಗೆ ಪಡೆಯದೆ ಅಕ್ರಮವಾಗಿ ಗಣಿಗಾರಿಕೆ ಹಾಗೂ ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನ ಬಂಧನ ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಿಸಲಾದ ಪ್ರಕರಣ ಸಂಬಂಧ ಈ ಹಿಂದೆ ನೀಡಿದ ಮಧ್ಯಂತರ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ತಡೆಯಾಜ್ಞೆ ವಿಸ್ತರಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ, ಅರ್ಜಿದಾರರು ಹಾಲಿ ಶಾಸಕರಾಗಿದ್ದು, ಅವರಲ್ಲದೆ ಓರ್ವ ವಿಧಾನಪರಿಷತ್ ಸದಸ್ಯರು ಸೇರಿದಂತೆ ಮೂವತ್ತಕ್ಕೂ ಅಧಿಕ ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನೋಟಿಸ್ ನೀಡದೆ ಪೊಲೀಸರು ಕ್ರಮಕ್ಕೆ ಮುಂದಾದ ಹಿನ್ನೆಲೆಯಲ್ಲಿ ಸ್ಥಳೀಯ ಚುನಾಯಿತ ಜನಪ್ರತಿನಿಧಿಯಾಗಿ ಅರ್ಜಿದಾರರು ಠಾಣೆಗೆ ಹೋಗಿ ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದಾರೆ. ಅವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿಲ್ಲ ಮತ್ತು ಕಾನೂನು ಕೈಗೆತ್ತಿಕೊಂಡಿಲ್ಲ ಎಂದು ವಿವರಿಸಿದರು.
ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್, ಅರ್ಜಿದಾರರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಪ್ರಕರಣದ ತನಿಖೆ ನಡೆಯಬೇಕು. ಆದ್ದರಿಂದ ಎಫ್‌ಐಆರ್ ರದ್ದುಪಡಿಸಬಾರದು ಎಂದು ಕೋರಿದರು. ವಾದ ಆಲಿಸಿದ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು. ಅಲ್ಲದೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿಗೆ ಆಗಸ್ಟ್ 1ರಂದು ಹೊರಡಿಸಿದ್ದ ಮಧ್ಯಂತರ ಆದೇಶ ವಿಸ್ತರಿಸಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಶಶಿರಾಜ್ ಶೆಟ್ಟಿ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಹರೀಶ್ ಪೂಂಜಾ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ವಿರುದ್ಧ ಅವಾಚ್ಯವಾಗಿ ಬೈದು ಬೆದರಿಕೆ ಒಡ್ಡಿದ್ದರು. ಜೊತೆಗೆ, ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ಸಹ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಎರಡು ಎಫ್‌ಐಆರ್ ದಾಖಲಿಸಿದ್ದರು. ಅದನ್ನು ಪ್ರಶ್ನಿಸಿ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಹರೀಶ್ ಪೂಂಜಾ ಹಾಗೂ ಇತರೆ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ:ಠಾಣೆ ಮುಂದೆ ಪ್ರತಿಭಟಿಸಿದ್ದ ಬಿಜೆಪಿ ಮುಖಂಡ ಪ್ರತಾಪ್ ಸಿಂಹ, ಹರೀಶ್ ಪೂಂಜಾ ಮತ್ತಿತರರ ವಿರುದ್ಧ ಎಫ್ಐಆರ್ - FIR against former MP Pratap Simha