ಬೆಂಗಳೂರು :ಬಾಲ ನ್ಯಾಯ ಕಾಯ್ದೆ ಪ್ರಕಾರ ಕಾನೂನು ಜೊತೆಗಿನ ಸಂಘರ್ಷಕ್ಕೊಳಗಾಗಿರುವ ಮಕ್ಕಳ ಪ್ರಕರಣಗಳ ನಿರ್ವಹಣೆಗೆ, ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ‘ಬಾಲ ನ್ಯಾಯ ಮಂಡಳಿ’ (ಜೆಜೆಬಿ)ಗೆ ಅಗತ್ಯ ಸಿಬ್ಬಂದಿ ಒದಗಿಸಲು, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.
ರಾಜ್ಯದಲ್ಲಿ ಬಾಲನ್ಯಾಯ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ವಿಚಾರವಾಗಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಹಾಗೂ ‘ಬಚಪನ್ ಬಚಾವೋ ಆಂದೋಲನ್’ ಸ್ವಯಂಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲರಾದ ಮೈತ್ರೆಯಿ ಕೃಷ್ಣನ್ ವಾದ ಮಂಡಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್‌ನ ಹಾಲಿ ನಾಲ್ವರು ನ್ಯಾಯಮೂರ್ತಿಗಳನ್ನೊಳಗೊಂಡ ಬಾಲ ನ್ಯಾಯ ಮಂಡಳಿ ರಚಿಸಲಾಗಿದೆ. ಈ ಮಂಡಳಿಗೆ ಪ್ರತ್ಯೇಕ ಸಚಿವಾಲಯ (ಅಧಿಕಾರಿ ಮತ್ತು ಸಿಬ್ಬಂದಿ) ಸ್ಥಾಪಿಸಬೇಕು ಎಂದು 2019 ರಲ್ಲಿ ಹೈಕೋರ್ಟ್ ಆದೇಶಿಸಿದೆ.