ಬೆಂಗಳೂರು: ಚಿಂತಾಮಣಿ ನಗರಸಭೆ ಸದಸ್ಯ ಅಗ್ರಹಾರ ಮುರಳಿ ಅವರ ಕೊಲೆ ಯತ್ನ ಪ್ರಕರಣದ ಮೊದಲ ಆರೋಪಿ ಡಿ.ನರೇನ್ ಕುಮಾರ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ ಡಿ.ನರೇನ್ ಕುಮಾರ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ.ವೆಂಕಟೇಶ್ ನಾಯ್ಕ್ ಅವರಿದ್ದ ಪೀಠ ಈ ಆದೇಶ ಮಾಡಿತು.
ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ತನಿಖಾಧಿಕಾರಿಗಳು ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಗಾಯಾಳು ಚೇತರಿಸಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟ ಪೀಠ, ಅರ್ಜಿದಾರನಿಗೆ ಜಾಮೀನು ನೀಡಿದೆ.
ಅರ್ಜಿದಾರ 2 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ನೀಡಬೇಕು. ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಸಾಕ್ಷ್ಯಾಧಾರ ತಿರುಚಲು ಪ್ರಯತ್ನಿಸಬಾರದು. ಅಧೀನ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು. ಇದೇ ಮಾದರಿಯ ಅಪರಾಧದಲ್ಲಿ ಭಾಗಿಯಾಗಬಾರದು ಎಂದು ನ್ಯಾಯಪೀಠ ಜಾಮೀನು ಮಂಜೂರಾತಿಗೆ ಷರತ್ತು ವಿಧಿಸಿದೆ.