ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯನ್ನು ಅಪಹರಿಸಲು ಸಹಕಾರ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಆರನೇ ಆರೋಪಿ ಹೆಚ್.ಟಿ.ಕೀರ್ತಿಗೆ ತನ್ನ ತಂದೆಯ ಮರಣೋತ್ತರ ವಿಧಿವಿಧಾನಗಳನ್ನು ನೆರವೇರಿಸಲು ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಹೆಚ್.ಟಿ.ಕೀರ್ತಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಇದೇ ಅರ್ಜಿಯಲ್ಲಿ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯನ್ನು ಅಪಹರಿಸಲು ಸಹಕಾರ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಇತರ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ ಅರ್ಜಿ ಸಂಬಂಧ ಆಕ್ಷೇಪಣೆಗೆ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಅರ್ಜಿದಾರರು ತಂದೆಯ ಮರಣದ ನಂತರ ಅಪರಕರ್ಮ ನೇರವೇರಿಸಲು ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಮೃತ ಪೋಷಕರ ಅಪರಕರ್ಮದಲ್ಲಿ ಭಾಗವಹಿಸಲು ಅನುವು ಮಾಡಿಕೊಡುವುದು ಧಾರ್ಮಿಕ ಹಕ್ಕುಗಳ ಭಾಗವೂ ಆಗಿದೆ. ಈ ನಿಟ್ಟಿನಲ್ಲಿ ಅರ್ಜಿದಾರರಿಗೆ ಜು.15ರವೆಗೆ 17 ದಿನಗಳ ಕಾಲ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶಿಸಿದೆ.