ಬೆಂಗಳೂರು : ಮಕ್ಕಳ ಅಶ್ಲೀಲ ದೃಶ್ಯ ವೀಕ್ಷಣೆ ಮಾಡಿದ್ದಲ್ಲದೇ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪದಲ್ಲಿ 24 ವರ್ಷದ ಯುವಕನಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್, ತನಿಖಾಧಿಕಾರಿಗಳು ಮತ್ತು ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಿ ವಿಚಾರಣೆ ಎದುರಿಸಲು ನಿರ್ದೇಶನ ನೀಡಿದೆ. ಅಲ್ಲದೇ, ಇದೇ ಮಾದರಿಯ ಅಪರಾಧ ಕೃತ್ಯದಲ್ಲಿ ಮತ್ತೆಂದೂ ಭಾಗಿಯಾಗದಂತೆ ಎಚ್ಚರಿಕೆಯನ್ನೂ ನೀಡಿದೆ.
ಮಕ್ಕಳ ಅಶ್ಲೀಲ ಚಿತ್ರ ವೀಕ್ಷಿಸಿದ ಹಾಗೂ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ ಆರೋಪದಲ್ಲಿ ಅರ್ಜಿದಾರ ಯುವಕನ ವಿರುದ್ಧ 2023ರ ಸೆಪ್ಟೆಂಬರ್ 23ರಂದು ರಾಮನಗರ ಸಿಇಎನ್ ಅಪರಾಧಗಳ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಯುವಕ ರಾಮನಗರ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಈ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ 2024ರ ಆಗಸ್ಟ್ 3ರಂದು ವಜಾಗೊಳಿಸಿತ್ತು. ಇದರಿಂದ, ಆತ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಲೈಂಗಿಕ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲ ವೆಬ್ ಪೋರ್ಟಲ್‌ಗಳನ್ನು ರೂಪಿಸಿದೆ. ಅದರಂತೆ, ರಾಷ್ಟ್ರೀಯ ಸೈಬರ್ ಪೋರ್ಟಲ್/ರಾಷ್ಟ್ರೀಯ ನಾಪತ್ತೆಯಾಗಿರುವ ಹಾಗೂ ಶೋಷಿತ ಮಕ್ಕಳ ಕೇಂದ್ರ ನೀಡಿದ ಮಾಹಿತಿ ಆಧರಿಸಿ, ಪ್ರಾಥಮಿಕ ವಿಚಾರಣೆ ನಡೆಸಿದಾಗ ಅರ್ಜಿದಾರ ಯುವಕ ಆನ್‌ಲೈನ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ್ದ. ಜತೆಗೆ, ಆ ವಿಡಿಯೊಗಳನ್ನು ತನ್ನ ಮೊಬೈಲ್ ಮೂಲಕ ಸಾಮಾಜಿಕ ಜಾಲತಾಣಕ್ಕೆ ಅಪ್‌ಲೋಡ್ ಮಾಡಿದ್ದನೆಂಬ ಆರೋಪವಿದೆ ಎಂದು ಆದೇಶದಲ್ಲಿ ತಿಳಿಸಿದೆ.