ಬೆಂಗಳೂರು: ಕೇತಗಾನಹಳ್ಳಿ ಸರ್ಕಾರಿ ಜಮೀನನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮತ್ತಿತರರಿಂದ ಒತ್ತುವರಿ ಮಾಡಿದ ಆರೋಪ ಪ್ರಕರಣದಲ್ಲಿ ಪ್ರತಿವಾದಿಗಳು ಉನ್ನತ ಸ್ಥಾನದಲ್ಲಿದ್ದಾರೆ ಎಂಬ ಕಾರಣದಿಂದ ಕಳೆದ ಐದು ವರ್ಷಗಳಿಂದ ತೆರವು ಕಾರ್ಯಕ್ಕೆ ಮುಂದಾಗಿಲ್ಲವೇ ಎಂದು ಕಂದಾಯ ಇಲಾಖೆ ಅಧಿಕಾರಿಗಳನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತು.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆದೇಶದಂತೆ ಕ್ರಮಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠ, ಮುಂದಿನ ಎರಡು ವಾರದಲ್ಲಿ ತೆರವು ಕಾರ್ಯ ಮಾಡಲು ಆಗಲಿದಯೇ ಇಲ್ಲವೇ ಎಂಬುದನ್ನು ತಿಳಿಸಿ, ಅಸಮರ್ಥರು ಎಂದಾರೆ ನಿಮ್ಮನ್ನು ಹದಿನೈದು ದಿನ ಜೈಲಿನಲ್ಲಿರಿಸಿದರೆ ಎಲ್ಲವೂ ಸರಿ ಹೋಗಲಿದೆ ಎಂದು ಎಚ್ಚರಿಕೆ ನೀಡಿ ವಿಚಾರಣೆಯನ್ನು ಮುಂದೂಡಿತು.
ಖುದ್ದು ಹಾಜರಿರುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಗೆ ಆದೇಶ:ಅರ್ಜಿಗೆ ಸಂಬಂಧಿಸಿದಂತೆ ಈ ಹಿಂದಿನ ವಿಚಾರಣೆ ವೇಳೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಿರಬೇಕು ಎಂದು ನ್ಯಾಯಪೀಠ ಆದೇಶಿಸಿತ್ತು. ಅದರಂತೆ ರಾಜೇಂದ್ರ ಕುಮಾರ ಕಟಾರಿಯಾ ಖುದ್ದು ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಲು ಮುಂದಾದರು.
ಇದಕ್ಕೆ ಪೀಠ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂತೆ ನ್ಯಾಯಾಂಗ ನಿಂದನೆ ಮೊಕದ್ದಮೆಗಳಲ್ಲಿ ಅದೂ ಸಾರ್ಜನಿಕ ಕಾಳಜಿಯುಳ್ಳ ಪ್ರಕರಣಗಳಲ್ಲಿ ಆಡಳಿತಾಂಗಕ್ಕೆ ಕಿಂಚಿತ್ತೂ ಕರುಣೆ ತೋರಬಾರದು ಎಂದಿದೆ. ಇದನ್ನೇ ನಾನೂ ಅನುಸರಿಸಬೇಕಾಗುತ್ತದೆ ಎಂದು ಪೀಠ ಎಚ್ಚರಿಕೆ ನೀಡಿತು.