ಬೆಂಗಳೂರು: ರಾಜ್ಯ ಪಠ್ಯಕ್ರಮದಿಂದ ಕೇಂದ್ರ ಪಠ್ಯಕ್ರಮ (ಸಿಬಿಎಸ್‌ಸಿಗೆ) ಸಂಯೋಜನೆಗೆ ನಿರಾಕ್ಷೇಪಣ ಪತ್ರ (ಎನ್‌ಒಸಿ) ಪಡೆಯಲು ಹಿಂದಿನ ಮೂರು ವರ್ಷದ ಲೆಕ್ಕ ಪರಿಶೋಧನಾ ವರದಿಯನ್ನು ಕಡ್ಡಾಯವಾಗಿ ಸಲ್ಲಿಸುವಂತೆ ಬಲವಂತಪಡಿಸಬಾರದು ಹಾಗೂ ನಿಯಮಾನುಸಾರ ಎನ್‌ಒಸಿ ನೀಡುವಂತೆ ಕೋರಿ ಮೈಸೂರಿನ ಬೆಳವಾಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಸಲ್ಲಿಸಿರುವ ಮನವಿಯನ್ನು ಕಾನೂನು ರೀತಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ರಾಷ್ಟ್ರೋತ್ಥಾನ ಪರಿಷತ್‌ನ ಪರಿಷತ್ ಬೆಂಗಳೂರಿನ ಪ್ರಧಾನ ಕಾರ್ಯದರ್ಶಿ ಎನ್. ದಿನೇಶ್ ಹೆಗ್ಡೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ ನಿರಾಕ್ಷೇಪಣ ಪತ್ರ (ಎನ್‌ಒಸಿ) ಮಂಜೂರು ಮಾಡುವ ಸಂಬಂಧ ರಾಷ್ಟ್ರೋತ್ಥಾನ ಪರಿಷತ್ 2024ರ ಮೇ 20ರಂದು ಸಲ್ಲಿಸಿರುವ ಮನವಿಯಂತೆ ಆನ್‌ಲೈನ್‌ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಕಾನೂನು ರೀತಿ ಪರಿಗಣಿಸಿ ಎರಡು ವಾರಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು, ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ಸೇರಿದಂತೆ ಸಂಬಂಧಪಟ್ಟ ಪ್ರತಿವಾದಿಗಳಿಗೆ ನಿರ್ದೇಶನ ನೀಡಿದ ಹೈಕೋರ್ಟ್ ಅರ್ಜಿಯನ್ನು ಇತ್ಯರ್ಥಪಡಿಸಿ ಆದೇಶಿಸಿತು.
ರಾಷ್ಟ್ರೋತ್ಥಾನ ಪರಿಷತ್ ಅಧೀನದಲ್ಲಿ ಮೈಸೂರಿನ ಬೆಳವಾಡಿಯ ಇಲವಾಲ ಗ್ರಾಮದಲ್ಲಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಹೆಸರಲ್ಲಿ 1ರಿಂದ 8ನೇ ತರಗತಿವರೆಗೆ ರಾಜ್ಯ ಪಠ್ಯಕ್ರಮದಲ್ಲಿ ಆಂಗ್ಲ ಮಾಧ್ಯಮದಲ್ಲಿ ಶಾಲೆ ನಡೆಸಲು ಸರ್ಕಾರ ಅನುಮತಿ ನೀಡಿತ್ತು. ಇದಕ್ಕೆ ಎಲ್ಲ ಅಗತ್ಯ ಪೂರ್ವಾನುಮತಿಗಳನ್ನು ಪಡೆದುಕೊಳ್ಳಲಾಗಿದೆ. ನರ್ಸರಿಯಿಂದ 8ನೇ ತರಗತಿವರೆಗೆ 591 ವಿದ್ಯಾರ್ಥಿಗಳಿದ್ದು, 2024-35ನೇ ಶೈಕ್ಷಣಿಕ ವರ್ಷದಲ್ಲಿ 306 ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ.