ಬೆಂಗಳೂರು :ಶ್ರೀರಂಗಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ಟಿಪ್ಪುಸುಲ್ತಾನ್ ಧ್ವಂಸಗೊಳಿಸಿ ಜಾಮಿಯಾ ಮಸೀದಿ ನಿರ್ಮಿಸಲಾಗಿದ್ದು, ಈ ಉತ್ಖನನ ನಡೆಸಿ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಜರಂಗ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ಕೆ. ವಿ ಅರವಿಂದ್ ಅವರ ವಿಭಾಗೀಯ ಪೀಠ, ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಜರಾಯಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮಂಡ್ಯ ಜಿಲ್ಲಾಧಿಕಾರಿ, ರಾಜ್ಯ ಧಾರ್ಮಿಕ ಪರಿಷತ್, ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ವಿಜಯನಗರ ಸಾಮ್ರಾಜ್ಯ, ಮೈಸೂರು ಸಾಮ್ರಾಜ್ಯ ಹಾಗೂ ದಳವಾಯಿ ದೊಡ್ಡಯ್ಯ ಸೇರಿ ಅನೇಕ ಆಡಳಿತಗಾರರು ಪೋಷಿಸಿಕೊಂಡು ಬಂದಿದ್ದರು. ಆದರೆ, ಇದನ್ನು ಟಿಪ್ಪು ಸುಲ್ತಾನ್ ಧ್ವಂಸಗೊಳಿಸಿದ್ದು, ಬಳಿಕ ಅದೇ ಜಾಗದಲ್ಲಿ ಜಾಮೀಯ ಮಸೀದಿ ನಿರ್ಮಿಸಿದ್ದಾನೆ.