ಬೆಂಗಳೂರು: ಕರ್ನಾಟಕ ರಾಜ್ಯದ ಬಹುತೇಕ ಎಲ್ಲ ನರ್ಸಿಂಗ್ ಕಾಲೇಜುಗಳಲ್ಲಿ ನಿಗದಿಗಿಂತ ಹೆಚ್ಚುವರಿ ಶುಲ್ಕವನ್ನು ವಸೂಲು ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ವೆಲ್ಫೇರ್ ಅಸೋಸಿಯೇಷನ್ ಆಫ್ ಪ್ರೊಪೇಷನಲ್ ಸ್ಕಾಲರ‍್ಸ್ ಇನ್ ಇಂಡಿಯಾ (ವಾಪಸಿ) ಅಧ್ಯಕ್ಷ, ಕೇರಳದ ಸಾಮಾಜಿಕ ಕಾರ್ಯಕರ್ತ ಎಂ.ಕೆ. ಥಾಮಸ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಾಜೀವ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ, ಕರ್ನಾಟಕ ನರ್ಸಿಂಗ್ ಕೌನ್ಸಿಲ್, ಇಂಡಿಯನ್ ನರ್ಸಿಂಗ್ ಕೌನ್ಸಿಲ್‌ಗೆ ನೋಟಿಸ್ ಜಾರಿ ಮಾಡಿತು. ಅಲ್ಲದೇ, ಅರ್ಜಿಯ ಸಂಬಂಧ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿ, ವಿಚಾರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಿತು.