ಬೆಂಗಳೂರು:ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ವಿರುದ್ಧ 204 ಕೋಟಿ ರೂ. ಪರಿಹಾರ ಕೋರಿ ದಾಖಲಿಸಿರುವ ದಾವೆಯನ್ನು ಕನಕಪುರದಿಂದ ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾಯಿಸಲು ಕೋರಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಡಿ.ಕೆ.ಶಿವಕುಮಾರ್ ಅವರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.
ಬಸನಗೌಡ ಪಾಟೀಲ್ ಸಲ್ಲಿಸಿರುವ ಸಿವಿಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ನ್ಯಾಯಪೀಠ, ನೋಟಿಸ್ ಜಾರಿಗೊಳಿಸಿದೆ. ಡಿ.ಕೆ.ಶಿವಕುಮಾರ್ ಹಾಗೂ ವಿಚಾರಣಾಧೀನ ನ್ಯಾಯಾಲಯದಲ್ಲಿ ಅವರ ಪರವಾಗಿ ಹಾಜರಾಗುವ ವಕೀಲರಿಗೆ ಹ್ಯಾಂಡ್ ಸಮನ್ಸ್ ಮೂಲಕ ನೋಟಿಸ್ ನೀಡಲು ಅನುಮತಿಸಿರುವ ಪೀಠವು, ವಿಚಾರಣೆಯನ್ನು ಮಾರ್ಚ್ 20ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ:ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದ ಸಂದರ್ಭದಲ್ಲಿ 2019ರ ಜೂನ್ 23ರಂದು ವಿಜಯಪುರದಲ್ಲಿ ಯತ್ನಾಳ್ ಅವರು ಮಾತನಾಡಿ, ಡಿ.ಕೆ.ಶಿವಕುಮಾರ್ ಅವರು ನಮ್ಮ (ಬಿಜೆಪಿ) ನಾಯಕರನ್ನು ಭೇಟಿ ಮಾಡಿ, ತಮ್ಮ ವಿರುದ್ಧದ ಆದಾಯ ತೆರಿಗೆ ಇಲಾಖೆ ಪ್ರಕರಣಗಳಿಂದ ರಕ್ಷಣೆ ಕೊಡಿಸುವಂತೆ ಕೋರಿದ್ದಾರೆ. ಈ ಸಂಬಂಧ ಡಿ.ಕೆ.ಶಿವಕುಮಾರ್ ಅವರು ನಮ್ಮ ಕೇಂದ್ರ ಸಚಿವರ ಮೂಲಕ ಲಾಬಿ ಮಾಡಿದ್ದಾರೆ. ವಿವಿಧ ಮೂಲಗಳ ಮೂಲಕ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದಾರೆ ಎಂಬುದು ನನಗೆ ತಿಳಿದಿದೆ. ತಮ್ಮ ವಿರುದ್ಧದ ಜಾರಿ ನಿರ್ದೇಶನಾಲಯದ ಪ್ರಕರಣಗಳನ್ನು ಮುಕ್ತಾಯಗೊಳಿಸಿದರೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಲು ತಮ್ಮ ವಿರೋಧ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂಬುದು ತಿಳಿದಿದೆ ಎಂದು ಹೇಳಿದ್ದರು. ಈ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡಿತ್ತು.