ಕರ್ನಾಟಕ

karnataka

ETV Bharat / state

ಅಕ್ರಮ ಮದ್ಯ ಮಾರಾಟ ನಿಷೇಧ ಕುರಿತು ಹೈಕೋರ್ಟ್ ಆದೇಶ ಪಾಲಿಸದ ಸರ್ಕಾರ: ಹೈಕೋರ್ಟ್​ಗೆ ಅರ್ಜಿ - BAN ON ILLEGAL LIQUOR SALE

ಅಕ್ರಮ ಮದ್ಯ ಮಾರಾಟ ನಿಷೇಧದ ಕುರಿತು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

high court
ಹೈಕೋರ್ಟ್ (ETV Bharat)

By ETV Bharat Karnataka Team

Published : Dec 5, 2024, 7:25 AM IST

ಬೆಂಗಳೂರು:ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನ್ಯಾಯಾಲಯದ ಆದೇಶ ಪಾಲಿಸಲಾಗಿಲ್ಲ ಎಂದು ಆರೋಪಿಸಿ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ವಕೀಲೆ ಹಾಗೂ ಮದ್ಯ ನಿಷೇಧ ಆಂದೋಲನದ ಸದಸ್ಯೆ ಸುಧಾ ಕಾಟ್ವಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಎ. ಹನುಮನರಸಯ್ಯ, ಅಬಕಾರಿ ಆಯುಕ್ತ ಡಾ.ಜೆ.ರವಿಶಂಕರ್ ಅವರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಜನವರಿ 9ಕ್ಕೆ ಮುಂದೂಡಿತು.

ಅಗತ್ಯ ಕ್ರಮಕ್ಕೆ ಆದೇಶಿಸಿದ್ದ ಹೈಕೋರ್ಟ್​:ರಾಜ್ಯದಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಮನೆ - ಅಂಗಡಿಗಳಲ್ಲಿ ವ್ಯಾಪಕವಾಗಿ ಅಕ್ರಮ ಮದ್ಯ ಮಾರಾಟವಾಗುತ್ತಿರುವ ಕುರಿತು ಮಹಿಳಾ ಸಂಘಟನೆಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಮದ್ಯ ನಿಷೇಧ ಆಂದೋಲನದ ಸದಸ್ಯೆ ಸುಧಾ ಕಾಟ್ವಾ 2020ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದ ದೂರುಗಳ ಬಂದಲ್ಲಿ ಸರ್ಕಾರ ಅದರ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಅದರಲ್ಲೂ ಮುಖ್ಯವಾಗಿ ಮಹಿಳೆಯರು ಅಥವಾ ಮಹಿಳಾ ಸಂಘಟನೆಗಳಿಂದ ಅಂತಹ ದೂರುಗಳು ಬಂದರೆ ಮಹಿಳಾ ಹಕ್ಕುಗಳ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಆದ್ಯತೆಯ ಮೇಲೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಆದ್ದರಿಂದ ಸರ್ಕಾರ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಜರುಗಿಸಬೇಕು ಎಂದು 2020ರ ಡಿಸೆಂಬರ್ 1ರಂದು ಆದೇಶ ನೀಡಿತ್ತು.

ಆದರೆ, ಹೈಕೋರ್ಟ್ ಈ ಆದೇಶ ಪಾಲಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಅನೇಕ ಮನವಿಗಳನ್ನು ಸಲ್ಲಿಸಲಾಯಿತು. 2021ರಿಂದ 2023ರವರೆಗೆ ಹಲವು ದೂರುಗಳನ್ನು ದಾಖಲಿಸಲಾಗಿದೆ. ಆದರೂ ಹೈಕೋರ್ಟ್ ಆದೇಶ ಪಾಲಿಸುವಲ್ಲಿ ಹಾಗೂ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಲ್ಲಿ ಸರ್ಕಾರ ವಿಫಲವಾಗಿದೆ. ಆದ್ದರಿಂದ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ:ಪಿಲಿಕುಳದಲ್ಲಿ ಡಿಸೆಂಬರ್ ತಿಂಗಳಲ್ಲಿ ಕಂಬಳ ಆಯೋಜಿಸುತ್ತಿಲ್ಲ: ಹೈಕೋರ್ಟ್​ಗೆ ಮಾಹಿತಿ ನೀಡಿದ ಸರ್ಕಾರ

ABOUT THE AUTHOR

...view details