ಬೆಂಗಳೂರು :ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ವಕೀಲ ವಿ. ಆರ್ ರಘನಾಥನ್ ಎಂಬುವವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ. ವಿ ಅರವಿಂದ್ ಅವರ ವಿಭಾಗೀಯ ಪೀಠ, ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ, ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಕೆಲವು ತಿಂಗಳಿಂದ ಒಂದಿಷ್ಟು ಹುದ್ದೆ ಭರ್ತಿಯಾಗದೆ ಖಾಲಿ ಉಳಿದಿದೆ. ಆದಷ್ಟು ಬೇಗ ಖಾಲಿ ಹುದ್ದೆಗೆ ಸೂಕ್ತ ವ್ಯಕ್ತಿಗಳನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ಜತೆಗೆ ಮುಂದಿನ ಆದೇಶದವರೆಗೆ ಈವರೆಗೂ ಕಾರ್ಯನಿರ್ವಹಿಸುತ್ತಿರುವ ಅಧ್ಯಕ್ಷರು ಹಾಗೂ ಸದಸ್ಯರು ಸೇವೆಯಲ್ಲಿ ಮುಂದುವರಿಯುವಂತೆ ಮಧ್ಯಂತರ ಆದೇಶ ಹೊರಡಿಸಬೇಕು ಎಂದು ಕೋರಿದರು. ವಾದ ಆಲಿಸಿದ ನ್ಯಾಯಪೀಠ ಪ್ರಕರಣ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಜತೆಗೆ ಮಧ್ಯಂತರ ಆದೇಶ ನೀಡಲು ನಿರಾಕರಿಸಿ ವಿಚಾರಣೆಯನ್ನು ಜು. 5ಕ್ಕೆ ಮುಂದೂಡಿದೆ.