ಕರ್ನಾಟಕ

karnataka

ETV Bharat / state

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ಪತ್ನಿ ನಿಖಿತಾ ಜಾಮೀನು ಅರ್ಜಿ ಜ.4ರಂದೇ ಇತ್ಯರ್ಥಕ್ಕೆ ಸೂಚನೆ - TECHIE ATUL SUBHASH SUICIDE CASE

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪತ್ನಿ ನಿಖಿತಾ ಸಿಂಘಾನಿಯಾ ಜಾಮೀನು ಅರ್ಜಿಯನ್ನು ಜ.4ರಂದೇ ಇತ್ಯರ್ಥಗೊಳಿಸಬೇಕು ಎಂದು ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)

By ETV Bharat Karnataka Team

Published : Dec 31, 2024, 10:25 PM IST

ಬೆಂಗಳೂರು:ಪತ್ನಿ ಮತ್ತವರ ಕುಟುಂಬದವರು ಕಿರುಕುಳ ನೀಡುತ್ತಿದ್ದಾರೆಂದು ಸುದೀರ್ಘ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಟೆಕ್ಕಿ ಅತುಲ್ ಸುಭಾಷ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಿಖಿತಾ ಸಿಂಘಾನಿಯಾ (ಪತ್ನಿ) ಜಾಮೀನು ಅರ್ಜಿ ಜನವರಿ 4ರಂದೇ ಇತ್ಯರ್ಥಗೊಳಿಸಬೇಕು ಎಂದು ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ. ಸೂಕ್ತ ಕಾರಣ ನೀಡದೆ ಬಂಧಿಸಿದ್ದು ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ನಿಖಿತಾ ಸುಭಾಷ್ ಮತ್ತವರ ಕುಟುಂಬದ ಸದಸ್ಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್​ ಚಂದನಗೌಡರ ಅವರಿದ್ದ ರಜಾಕಾಲದ ನ್ಯಾಯಪೀಠ ಈ ಆದೇಶ ನೀಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರಲ್ಲಿ ಒಬ್ಬರಾದ ನಿಖಿತಾಗೆ ಸಣ್ಣ ಮಗುವಿದೆ. ಮಗುವನ್ನು ವಶಕ್ಕೆ ಪಡೆಯುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಮಗುವಿನ ಅಜ್ಜ(ತಂದೆಯ ಅಪ್ಪ) ಸುಪ್ರೀಂ ಕೋರ್ಟ್‌ನಲ್ಲಿ ಹೆಬಿಯಾಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಸಂಬಂಧ ನಿಖಾ ಸಿಂಘಾನಿಯಾ ಅವರಿಗೆ ನೋಟಿಸ್ ಜಾರಿಯಾಗಿದೆ. ಆದರೆ, ಆ ನೋಟಿಸ್‌ಗೆ ಪ್ರತಿಕ್ರಿಯೆ ನೀಡಬೇಕಾಗಿದೆ. ಆದರೆ, ಪ್ರಸ್ತುತ ಅರ್ಜಿದಾರರು ನ್ಯಾಯಾಂಗ ಬಂಧನಲ್ಲಿದ್ದು, ಆಕ್ಷೇಪಣೆ ಸಲ್ಲಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಅವರನ್ನು ಬಂಧಿಸುವ ಸಂದರ್ಭದಲ್ಲಿ ಯಾವ ಕಾರಣಕ್ಕಾಗಿ ಬಂಧಿಸಲಾಗಿದೆ ಎಂಬುದಕ್ಕೆ ವಿವರಣೆ ನೀಡಿಲ್ಲ. ಆದ್ದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಹಾಜರಿದ್ದ ಸರ್ಕಾರದ ಪರ ವಕೀಲರು, ಪ್ರಕರಣ ಸಂಬಂಧ ತನಿಖಾಧಿಕಾರಿಗಳಿ ಮಾಹಿತಿ ಪಡೆಯಬೇಕಿದೆ. ಆದ್ದರಿಂದ ಜಾಮೀನು ಮಂಜೂರು ಮಾಡಬಾರದು ಎಂದು ಪೀಠಕ್ಕೆ ತಿಳಿಸಿದರು.

ವಾದ ಆಲಿಸಿದ ನ್ಯಾಯಪೀಠ, ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿದಾರರ ಜಾಮೀನು ಅರ್ಜಿ 2025ರ ಜನವರಿ 4ಕ್ಕೆ ನಿಗದಿಯಾಗಿದ್ದು, ಅಂದೇ ವಿಚಾರಣೆ ಪೂರ್ಣಗೊಳಿಸಿ ಇತ್ಯರ್ಥಪಡಿಸಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಪತ್ನಿ ಹಾಗೂ ಮನೆಯವರು ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಸುದೀರ್ಘ ಡೆತ್​ನೋಟ್ ಬರೆದಿಟ್ಟು ಡಿ.9ರಂದು ಮಾರತ್ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುನೆಕೊಳಲಿನಲ್ಲಿದ್ದ ಮನೆಯಲ್ಲಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಮೊಬೈಲ್‌ನಲ್ಲಿ ಮಾಡಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಷ್ಟ್ರದೆಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ 108ರ ಆತ್ಮಹತ್ಯೆಗೆ ಪ್ರಚೋದನೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಡಿ.20ರಂದು ನಿಖಿತಾಳನ್ನು ಹರಿಯಾಣದ ಗುರುಗ್ರಾಮ ಹಾಗೂ ತಾಯಿ, ಸಹೋದರರನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಹೋಟೆಲ್‌ವೊಂದರಲ್ಲಿ ಬಂಧಿಸಿದ್ದರು. ಸದ್ಯ ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ:ಪಿಎಫ್ ಹಣ ಪಾವತಿಸದೆ ವಂಚನೆ ಆರೋಪ : ರಾಬಿನ್ ಉತ್ತಪ್ಪ ವಿರುದ್ಧದ ವಾರೆಂಟ್‌ಗೆ ಹೈಕೋರ್ಟ್ ತಡೆ

ABOUT THE AUTHOR

...view details