ಕರ್ನಾಟಕ

karnataka

ETV Bharat / state

ಮತದಾರರಿಗೆ ಹಂಚಲು ದಿನಸಿ ವಸ್ತುಗಳ ಸಂಗ್ರಹ ಆರೋಪ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧದ ಪ್ರಕರಣ ರದ್ದು - HIGH COURT

ಮತದಾರರಿಗೆ ಹಂಚಲು ದೊಡ್ಡ ಪ್ರಮಾಣದಲ್ಲಿ ದಿನಸಿ ವಸ್ತುಗಳು ಸಂಗ್ರಹ ಮಾಡಿದ ಆರೋಪ ಸಂಬಂಧ ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಕೃಷ್ಣಯ್ಯ ಶೆಟ್ಟಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಕೃಷ್ಣಯ್ಯ ಶೆಟ್ಟಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ (ETV Bharat)

By ETV Bharat Karnataka Team

Published : Feb 6, 2025, 7:23 AM IST

ಬೆಂಗಳೂರು:ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಂಚುವುದಕ್ಕಾಗಿ ದೊಡ್ಡ ಪ್ರಮಾಣದಲ್ಲಿ ದಿನಸಿ ವಸ್ತುಗಳು ಸಂಗ್ರಹ ಮಾಡಿದ ಆರೋಪದಲ್ಲಿ ಮಾಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮತ್ತು ಮಾಜಿ ಸಚಿವ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ನ್ನು ಇತ್ತೀಚೆಗೆ ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ತನ್ನ ವಿರುದ್ಧದ ಎಫ್‌ಐಆರ್ ರದ್ದುಕೋರಿ ಕೃಷ್ಣಯ್ಯ ಶೆಟ್ಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಸಂಗ್ರಹವಾಗಿದ್ದ ದಿನಸಿ ಸಾಮಗ್ರಿಗಳನ್ನು ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಂಚಿಕೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಐಪಿಸಿ ಸೆಕ್ಷನ್ 17ಇ (ಲಂಚಗುಳಿತನ) ಅಡಿ ಪ್ರಕರಣ ಮುಂದುವರೆಸುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿದೆ.

ಈ ಪ್ರಕರಣದಲ್ಲಿ ಅರ್ಜಿದಾರ ಕೃಷ್ಣಯ್ಯ ಶೆಟ್ಟಿ ತನ್ನ ಮನೆಯಲ್ಲಿ ದಿನಸಿ ಸಾಮಗ್ರಿಗಳನ್ನು ಸಂಗ್ರಹ ಮಾಡಿದ್ದಾರೆ. ಆದರೆ, ಅದನ್ನು ಮತದಾರರಿಗೆ ಹಂಚಿಕೆ ಮಾಡಿಲ್ಲ. ಆದ್ದರಿಂದ ಐಪಿಸಿ 171ಬಿ(ಮತದಾರರಿಗೆ ಲಂಚ ನೀಡುವುದು) ಅಡಿಯ ಆರೋಪಕ್ಕೆ ಲಂಚಗುಳಿತನದ ಆಧಾರದಲ್ಲಿ ಅಪರಾಧಿಯಾಗುವುದಿಲ್ಲ ಎಂದು ಪೀಠ ಹೇಳಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣಯ್ಯ ಶೆಟ್ಟಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚುವುದಕ್ಕಾಗಿ ಮನೆಯಲ್ಲಿ ದಿನಸಿ ಸಾಮಗ್ರಿಗಳನ್ನು ದಾಸ್ತಾನು ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ 2023ರ ಏಪ್ರಿಲ್ 1ರಂದು ಅವರ ಮನೆಯ ಮೇಲೆ ದಾಳಿ ನಡೆಸಿದ್ದ ಚುನಾವಣಾಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಶೆಟ್ಟಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪೊಲೀಸರು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ವಾದ ಮಂಡಿಸಿದ್ದರು.

ಇದಕ್ಕೆ ಆಕ್ಷೇಪಿಸಿದ್ದ ಸರ್ಕಾರಿ ವಕೀಲರು, ವಿಜೇಶ್ ಪಿಳ್ಳೈ ಪ್ರಕರಣದಲ್ಲಿ ಮಾಹಿತಿದಾರರು ಅಥವಾ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುವುದಕ್ಕೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಸಲಿಸಬಹುದು ಎಂಬುದಾಗಿ ಹೈಕೋರ್ಟ್ ತೀರ್ಪು ನೀಡಿದೆ. ಪ್ರಕರಣ ದಾಖಲಿಸುವ ಪ್ರಕ್ರಿಯೆಯಲ್ಲಿ ಯಾವುದೇ ತಪ್ಪಾಗಿಲ್ಲ. ಹೀಗಾಗಿ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.

ಇದನ್ನೂ ಓದಿ: ದಿವಾಳಿ ಪ್ರಕ್ರಿಯೆಯಲ್ಲಿ ವಶಪಡಿಸಿಕೊಂಡ ಸಾಲ ಪತ್ರಗಳ ವಿವರ ಕೇಳಿ ಹೈಕೋರ್ಟ್ ಮೊರೆಹೋದ ವಿಜಯ್ ಮಲ್ಯ

ಇದನ್ನೂ ಓದಿ:ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ರಾಜೀನಾಮೆಗೆ ಕಾರಣ ವಿಚಾರಿಸಿ, 10 ದಿನಗಳ ಬಳಿಕ ಅಂಗೀಕರಿಸಬೇಕು: ಹೈಕೋರ್ಟ್

ABOUT THE AUTHOR

...view details