ಬೆಂಗಳೂರು:ಉದ್ಯಮಿಗಳು, ಸೆಲೆಬ್ರೆಟಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡಿ ಅಕ್ರಮವಾಗಿ ಹಣ ಗಳಿಸಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದಲ್ಲಿ ನಟಿ ರಾಗಿಣಿ ದ್ವಿವೇದಿ ಮತ್ತು ಪ್ರಶಾಂತ್ ರಂಕ ವಿರುದ್ಧ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಮತ್ತು ಈ ಸಂಬಂಧ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ರಾಗಿಣಿ ಮತ್ತು ಪ್ರಶಾಂತ್ ರಂಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರಿದ್ದ ಪೀಠ ಈ ಆದೇಶ ನೀಡಿತು.
ಆರೋಪಪಟ್ಟಿಯಲ್ಲಿ ಸಾಕ್ಷ್ಯಾಧಾರಗಳು ಮತ್ತು ಇತರೆ ಆರೋಪಗಳ ಹೇಳಿಕೆಗಳನ್ನು ಹೊರತುಪಡಿಸಿದರೆ ಅರ್ಜಿದಾರರು ಪಾರ್ಟಿಗಳನ್ನು ಆಯೋಜನೆ ಮಾಡುವುದು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡಿರುವುದಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಯಾವುದೇ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ. ಹೀಗಾಗಿ ಅರ್ಜಿದಾರರ ವಿರುದ್ದ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆ ಮುಂದುವರೆಯುವುದು ಕಾನೂನಿನ ದುರ್ಬಳಕೆಯಾಗುತ್ತದೆ ಎಂದು ಪೀಠ ತಿಳಿಸಿದೆ.