ಬೆಂಗಳೂರು:ಕಾಂಗ್ರೆಸ್ ನಾಯಕರಾಹುಲ್ ಗಾಂಧಿ ಅವರ ದ್ವೇಷದ ಅಂಗಡಿ ಕರ್ನಾಟಕವನ್ನು ಮತಾಂಧರ ಗಲಭೆಯ ತೋಟವನ್ನಾಗಿ ಮಾಡಿದೆ ಎಂಬುದಾಗಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ್ದ ಆರೋಪದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಹಾಗೂ ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ತಮ್ಮ ವಿರುದ್ಧದ ಎಫ್‌ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ಎಂದು ಕೋರಿ ಬಿ.ವೈ.ವಿಜಯೇಂದ್ರ ಹಾಗೂ ಬಿಜೆಪಿ ಘಟಕದ ಎಕ್ಸ್ ಖಾತೆ ನಿರ್ವಹಣೆದಾರ ಪ್ರಶಾಂತ ಮಾಕನೂರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ''ಈ ಪ್ರಕರಣ ರಾಜಕೀಯ ದುರುದ್ದೇಶದಿಂದ ಕೂಡಿದೆ. ಅರ್ಜಿದಾರರಿಗೆ ಕಿರುಕುಳ ನೀಡುವ ಉದ್ದೇಶದ ಅಮೂರ್ತ ಸ್ವರೂಪದ ದೂರಾಗಿದೆ. ಅಲ್ಲದೇ, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಉಲ್ಲಂಘನೆಯೂ ಆಗಿದ್ದು, ಜಾವೇದ್ ಅಹಮದ್ ಹಾಜಂ ಮತ್ತು ಮಹಾರಾಷ್ಟ್ರ ಸರ್ಕಾರದ ವಿರುದ್ಧದ ಪ್ರಕರಣದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಪರಸ್ಪರ ಭಿನ್ನಾಭಿಪ್ರಾಯವನ್ನು ಅಭಿವ್ಯಕ್ತಿ ಸ್ವಾತಂತ್ರ್ಯ ಗೌರವಿಸಬೇಕು ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಪರಿಗಣಿಸಿ ಈ ಪ್ರಕರಣವನ್ನು ರದ್ದುಗೊಳಿಸಬೇಕು'' ಎಂದು ಕೋರಿದರು.