ಬೆಂಗಳೂರು:ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಖಂಡಿಸಿದ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಿದ್ದಕ್ಕೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿತು.
ಪ್ರಕರಣ ರದ್ದು ಕೋರಿ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ. ಕಾನೂನು ಪ್ರಕಾರ ಆದೇಶ ಹೊರಡಿಸಿದ ಅಧಿಕಾರಿ ಅಥವಾ ಅವರಿಗಿಂತ ಮೇಲಿನ ಶ್ರೇಣಿಯ ಅಧಿಕಾರಿ ದೂರು ದಾಖಲಿಸಬೇಕಿದೆ. ಈ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ಖಾಸಗಿ ದೂರು ದಾಖಲಿಸಿರುವುದು ಮತ್ತು ಆ ದೂರು ಪರಿಗಣಿಸಿ ಅರ್ಜಿದಾರರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕ್ರಮ ಜರುಗಿಸಿರುವುದು ಕಾನೂನು ಬಾಹಿರ ಎಂಬ ಅರ್ಜಿದಾರರ ಪರ ವಕೀಲರ ವಾದ ಮಾಡಿದ್ದರು. ಇದನ್ನು ನ್ಯಾಯಾಲಯ ಮಾನ್ಯ ಮಾಡಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ಸ್ವಾತಂತ್ರ್ಯ ಉದ್ಯಾನವನ್ನು ಹೊರತುಪಡಿಸಿ ಬೆಂಗಳೂರಿನ ಇತರೆ ಭಾಗದಲ್ಲಿ ಪ್ರತಿಭಟನೆ ನಡೆಸಬಾರದೆಂದು ಆದೇಶ ಹೊರಡಿಸಿದೆ. ಈ ಆದೇಶ ಉಲ್ಲಂಘಿಸಿ ಮತ್ತು ಪೂರ್ವಾನುಮತಿ ಪಡೆಯದೇ ಬೆಂಗಳೂರಿನ ಟೌನ್‌ಹಾಲ್ ಮುಂದೆ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿ ಭಂಗ ಉಂಟುಮಾಡಿದ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಎಸ್.ಜೆ.ಪಾರ್ಕ್ ಠಾಣೆಯ ಇನ್ಸ್‌ಪೆಕ್ಟರ್ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿದಾರರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ ಎಂದರು. ಆದರೆ ನಿಯಮದ ಪ್ರಕಾರ ಇನ್ಸ್ಪೆಕ್ಟರ್ಗೆ ದೂರು ದಾಖಲಿಸುವ ಅಧಿಕಾರವಿಲ್ಲ. ಹಾಗಾಗಿ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿದರು.