ಬೆಂಗಳೂರು:ಧಾರವಾಡ ಜಿಲ್ಲೆಯ ಹೆಬ್ಬಳ್ಳಿಯ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯ ನಿಗದಿಪಡಿಸಿರುವ ದೋಷಾರೋಪ ಕೈಬಿಡುವಂತೆ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣ ಸಂಬಂಧ ದೋಷಾರೋಪಣೆ ಹಾಗೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ನ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ಕೋರಿ ಶಾಸಕ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನ್ಯಾಯಪೀಠ, ಸೋಮವಾರ ನಿರ್ಧಾರ ಪ್ರಕಟಿಸಿತು. ಇನ್ನಷ್ಟೇ ಅರ್ಜಿಯ ವಿಸ್ತೃತ ಆದೇಶದ ಪ್ರತಿ ಲಭ್ಯವಾಗಬೇಕಿದೆ.
ಈ ಹಿಂದೆ ಅರ್ಜಿಗೆ ಸಂಬಂಧಿಸಿದಂತೆ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ದೋಷಾರೋಪ ಪಟ್ಟಿಯಲ್ಲಿನ ಎಲ್ಲಾ ದಾಖಲೆಗಳನ್ನು ಆರೋಪಿಗೆ ಒದಗಿಸಿಲ್ಲ. ಪ್ರಕರಣದಲ್ಲಿ ಪ್ರಾಸಿಕ್ಯೂಷನ್, ಶಸ್ತ್ರಾಸ್ತ್ರ ಕಾಯ್ದೆ 1959ರ ಪ್ರಕಾರ ಮೊದಲ ಆರೋಪಿ ಬಸವರಾಜ ಮುತ್ತಗಿ ಮೇಲೆ ಮಾತ್ರವೇ ಪೂರ್ವಾನುಮತಿ ಪಡೆದಿದೆ. ವಿನಯ್ ಕುಲಕರ್ಣಿ ಮೇಲೆ ಪಡೆದಿಲ್ಲ. ವಿನಯ್ ಕುಲಕರ್ಣಿ ವಿರುದ್ಧ ವಿಶೇಷ ನ್ಯಾಯಾಲಯ ದೋಷಾರೋಪ ನಿಗದಿಪಡಿಸುವಾಗ ಶಸ್ತ್ರಾಸ್ತ್ರ ಕಾಯ್ದೆಯನ್ನೂ ಅಡಕಗೊಳಿಸಿರುವುದು ತಪ್ಪು ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ತಿಳಿಸಿದರು.