ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ (ರೇಸ್ ಕೋರ್ಸ್)ನಲ್ಲಿ ಸೂಕ್ತ ದಾಖಲೆ ಮತ್ತು ರಿಜಿಸ್ಟರ್ ನಿರ್ವಹಿಸದೆ ಅನಧಿಕೃತವಾಗಿ ಕುದುರೆ ಪಂದ್ಯಗಳಿಗೆ ಬೆಟ್ಟಿಂಗ್ ಆಯೋಜಿಸಿ ಪಂಟರ್ಗಳಿಂದ ಹಣ ಸಂಗ್ರಹಿಸಿದ ಆರೋಪದ ಮೇಲೆ 26 ಮಂದಿ ಹಾಗೂ ಕಂಪನಿ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಮತ್ತು ಅದಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ಸಿಸಿಬಿ ಪೊಲೀಸರು ದಾಖಲಿಸಿದ ಎಫ್ಐಆರ್ ಹಾಗೂ ಅದರ ಕುರಿತ ತನಿಖೆ ರದ್ದುಪಡಿಸಲು ಕೋರಿ ಸೂರ್ಯ ಆ್ಯಂಡ್ ಕೋ ಸೇರಿದಂತೆ ಬೆಂಗಳೂರು ಟರ್ಫ್ ಕ್ಲಬ್ ಆವರಣದಲ್ಲಿ ಹಲವು ಅಕ್ರಮ ಬೆಟ್ಟಿಂಗ್ ನಡೆಸುತ್ತಿದ್ದ 26 ಎಂಟರ್‌ಪ್ರೈಸಸ್ ಕಂಪನಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಅರ್ಜಿದಾರರು ಕೋಟ್ಯಂತರ ರೂ.ಗಳ ಅವ್ಯವಹಾರ ಮಾಡಿದ್ದಾರೆ ಎಂಬ ಅಂಶ ತನಿಖೆ ಸಂದರ್ಭದಲ್ಲಿ ಬಹಿರಂಗವಾಗಿದೆ. ಇದು ಅತ್ಯಂತ ಗಂಭೀರ ಸ್ವರೂಪದ ಆರೋಪವಾಗಿದೆ. ಜಿಎಸ್ಟಿ ಮತ್ತು ಟಿಡಿಎಸ್ ಮೊತ್ತ ಪಾವತಿಗೆ ಸಂಗ್ರಹಿಸಿರುವ ಕೊಟ್ಯಂತರ ರೂ.ಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಪ್ರಕರಣದ ಆರೋಪ ಸಂಬಂಧ ದಾಖಲಾಗಿರುವ ಎಫ್ಐಆರ್ ಸಾಬೀತುಪಡಿಸುವ ಉದ್ದೇಶದಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ಆರೋಪವನ್ನು ಸಾಬೀತುಪಡಿಸಲು ಅಗತ್ಯ ಸಾಕ್ಷ್ಯಾಧಾರಗಳು ಸಂಗ್ರಹ ಮಾಡಬೇಕಾಗಿದ್ದು, ಅದಕ್ಕೆ ಮುಕ್ತ ಅವಕಾಶ ನೀಡಿ ಸರಿಯಾದ ರೀತಿಯಲ್ಲಿ ವಿಚಾರಣೆ ನಡೆಸುವುದಕ್ಕೆ ಅವಕಾಶ ನೀಡದಿದ್ದಲ್ಲಿ ಆರೋಪಿಗಳು ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಲಿದೆ. ಆದ್ದರಿಂದ ನ್ಯಾಯಾಲಯ ಮಧ್ಯಪ್ರವೇಶ ಮಾಡಬಾರದು ಎಂದು ನ್ಯಾಯಪೀಠ ತಿಳಿಸಿತು.