ಬೆಂಗಳೂರು:ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವ ವೇಳೆ ಚಾಲಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಗೆ ಪರಿಹಾರ ರೂಪದಲ್ಲಿ 5 ಲಕ್ಷ ರೂ ಪಾವತಿಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಓಲಾ ಕ್ಯಾಬ್ ಮಾತೃ ಸಂಸ್ಥೆ ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 17ಕ್ಕೆ ನಿಗದಿ ಮಾಡಿದೆ.
ಮೇಲ್ಮನವಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಅರ್ಜಿಯ ಸಂಬಂಧ ಹಿಂದೆ ನಡೆದ ವಿಚಾರಣೆ ವೇಳೆ 5 ಲಕ್ಷ ರೂ. ಪರಿಹಾರ ನೀಡುವಂತೆ ಏಕಸದಸ್ಯ ಪೀಠದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ತೆರವು ಮಾಡುವಂತೆ ಕೋರಿ ಸಂತ್ರಸ್ತ ಮಹಿಳೆ ಮಧ್ಯಂತರ ಅರ್ಜಿಯ ಮೂಲಕ ಮನವಿ ಮಾಡಿದ್ದರು.
ವಿಚಾರಣೆ ವೇಳೆ, ಓಲಾ ಪರ ವಕೀಲರು, ''ಇದು 5 ಲಕ್ಷ ಪರಿಹಾರ ಪಾವತಿಸುವ ವಿಚಾರವಲ್ಲ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ನಿಷೇಧ, ತಡೆ ಮತ್ತು ಪರಿಹಾರ) ಕಾಯಿದೆ 2013ರ ವ್ಯಾಖ್ಯಾನಕ್ಕೆ ಸಂಬಂಧಿಸಿದ ವಿಚಾರವೂ ಇದೆ. ನಾವು ಚಾಲಕರಿಗೆ ಉದ್ಯೋಗ ನೀಡಿಲ್ಲ. ಓಲಾ ಸೇವೆಯನ್ನು ಚಾಲಕರು ಬಳಸಿಕೊಳ್ಳುತ್ತಾರೆ. ಚಾಲಕರು ಸ್ವತಂತ್ರ ಗುತ್ತಿಗೆದಾರರಾಗಿದ್ದಾರೆ'' ಎಂದು ವಿವರಿಸಿದ್ದರು.
ಪ್ರಕರಣ ಸಂಬಂಧ ಸೆಪ್ಟೆಂಬರ್ 30ರಂದು, ಏಕಸದಸ್ಯ ಪೀಠವು 5 ಲಕ್ಷ ಪರಿಹಾರ ಹಣವಲ್ಲದೇ, ಸಂತ್ರಸ್ತೆಗೆ ವ್ಯಾಜ್ಯ ವೆಚ್ಚವಾಗಿ ಹೆಚ್ಚುವರಿ 50 ಸಾವಿರ ಮೊತ್ತವನ್ನು ಕಂಪನಿ ಪಾವತಿಸಬೇಕು. ಅಲ್ಲದೇ ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರದ ಹೆಚ್ಚುವರಿ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಯವರು ವೈಯಕ್ತಿಕವಾಗಿ 1 ಲಕ್ಷ ರೂ. ಹಣವನ್ನು ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸಬೇಕು. ಸಂತ್ರಸ್ತೆ ನೀಡಿದ ದೂರಿನ ಕುರಿತು ಕಂಪನಿಯ ಆಂತರಿಕ ದೂರುಗಳ ಸಮಿತಿ ವಿಚಾರಣೆ ನಡೆಸಬೇಕು. ಆ ವಿಚಾರಣಾ ಪ್ರಕ್ರಿಯೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸಬೇಕು. ಬೆಂಗಳೂರು ನಗರ ಜಿಲ್ಲಾಧಿಕಾರಿ ಸಮಿತಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಓಲಾ ಮೇಲ್ಮನವಿ ಸಲ್ಲಿಸಿತ್ತು.
ಪ್ರಕರಣದ ಹಿನ್ನೆಲೆ:2019ರಲ್ಲಿ ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವಾಗ ಚಾಲಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದು, ಚಾಲಕನ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಕೋರಿ ಸಂತ್ರಸ್ತೆಯು ಎಎನ್‌ಐ ಟೆಕ್ನಾಲಜೀಸ್ಗೆ ದೂರು ನೀಡಿದ್ದರು. ಆಂತರಿಕ ದೂರುಗಳ ಸಮಿತಿಯು ತಮ್ಮ ದೂರನ್ನು ಪರಿಗಣಿಸಿ ಅದರ ಬಗ್ಗೆ ವಿಚಾರಣೆ ನಡೆಸುವ ಅಧಿಕಾರ ಹೊಂದಿಲ್ಲ ಎಂದು ಕಂಪನಿಯು ಸಂತ್ರಸ್ತೆಗೆ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ಏಕಸದಸ್ಯ ಪೀಠ ಪುರಸ್ಕರಿಸಿತ್ತು.
ಇದನ್ನೂ ಓದಿ: ಓಲಾ ಚಾಲಕನಿಂದ ಲೈಂಗಿಕ ಕಿರುಕುಳ: ಸಂತ್ರಸ್ತೆಗೆ 5 ಲಕ್ಷ ಪಾವತಿ ಆದೇಶಕ್ಕೆ ತಡೆ - high court - HIGH COURT
ಇದನ್ನೂ ಓದಿ: ಇದನ್ನೂ ಓದಿ:2ನೇ ಮಗು ಪಡೆಯಲು ಅಡ್ಡಿಯಾದ ಬಾಡಿಗೆ ತಾಯ್ತನ ಕಾಯಿದೆಯ ಸೆಕ್ಷನ್‌ಗಳ ರದ್ದತಿಗೆ ಅರ್ಜಿ: ಸರ್ಕಾರಕ್ಕೆ ನೋಟಿಸ್