ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮಧ್ಯಾಹ್ನ 2.30ಕ್ಕೆ ನಿಗದಿಪಡಿಸಿದೆ.
ತಮ್ಮ ವಿರುದ್ಧ ಸದಾಶಿವ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣ ರದ್ದುಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ವಿಶೇಷ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್, ಪ್ರಕರಣ ಸಂಬಂಧ ಈಗಾಗಲೇ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಪೋಕ್ಸೋ ಕಾಯಿದೆ ಸೆಕ್ಷನ್ 35ರಲ್ಲಿ ತಿಳಿಸಿರುವಂತೆ, ಪ್ರಕರಣ ಸಂಬಂಧ ಕಾಗ್ನಿಜೆನ್ಸ್ ಪಡೆದ ಬಳಿಕ 30 ದಿನಗಳಲ್ಲಿ ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳಬೇಕು. ವಿಳಂಬವಾದಲ್ಲಿ ಅದಕ್ಕೆ ಸೂಕ್ತ ಕಾರಣವನ್ನು ವಿಶೇಷ ನ್ಯಾಯಾಲಯ ದಾಖಲಿಸಬೇಕು ಎಂದು ತಿಳಿಸಲಾಗಿದೆ.
ಆದರೆ, ಕಾಗ್ನಿಜೆನ್ಸ್ ಪಡೆದುಕೊಂಡು ಹೀಗಾಗಲೇ ಆರು ತಿಂಗಳು ಕಳೆದಿದೆ. ಆದ್ದರಿಂದ ಅರ್ಜಿದಾರ ಆರೋಪಿಯನ್ನು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯ್ತಿ ನೀಡಿ ಈ ಹಿಂದೆ ನೀಡಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಬೇಕು ಎಂದು ಕೋರಿದರು.
ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಸಿ. ವಿ. ನಾಗೇಶ್, ಅರ್ಜಿಗೆ ಸಂಬಂಧಿಸಿದಂತೆ ತಮ್ಮ ವಾದವನ್ನು ಸೋಮವಾರ ಪೂರ್ಣಗೊಳಿಸುವುದಾಗಿ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ನಿಗದಿ ಪಡಿಸಲಾಗುವುದು. ಅಂದೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿತು. ಅಲ್ಲದೆ, ಅರ್ಜಿದಾರ ಯಡಿಯೂರಪ್ಪ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಿಯಿಂದ ನೀಡಿ ಆದೇಶಿಸಿದರುವ ಆದೇಶವನ್ನು ವಿಸ್ತರಿಸಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.
ಪ್ರಕರಣ ಹಿನ್ನೆಲೆ:ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಬಿಎಸ್ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಈ ಮೊದಲು ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಯಡಿಯೂರಪ್ಪ ಅವರನ್ನು ಬಂಧಿಸದಂತೆ ಮತ್ತು ಖುದ್ದು ವಿಚಾರಣೆಗೆ ವಿನಾಯಿತಿ ನೀಡಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸಿಐಡಿ ಮಧ್ಯಂತರ ಅರ್ಜಿ ಸಲ್ಲಿಸಿತ್ತು.
ಇದನ್ನೂ ಓದಿ:'ಯಡಿಯೂರಪ್ಪನವರ ವಿರುದ್ಧದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನಡೆ ನ್ಯಾಯಿಕ ಪಕ್ಷಪಾತದಂತಿದೆ': CJIಗೆ ಪತ್ರ ಬರೆದ ಬೆಂಗಳೂರಿನ ವಕೀಲ