ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಉಂಟಾದ ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದವರ ಪತ್ತೆ ಹಚ್ಚಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥ ಪಡಿಸಿ ಆದೇಶಿಸಿದೆ.
ವಕೀಲ ಶಿಜಿ ಮಲಯಾಳಿ ಹಾಗೂ ನವದೆಹಲಿಯ ಕೆ ಆರ್ ಸುಭಾಷ್ ಚಂದ್ರನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿದ್ದ ಸಹಾಯಕ ಸಾಲಿಸಿಟರ್ ಜನರಲ್, ಲಾರಿ ಮತ್ತು ಅದರ ಚಾಲಕ ಅರ್ಜುನ್ ಮೃತದೇಹ ಪತ್ತೆಯಾಗಿರುವುದರಿಂದ ಅರ್ಜಿಯ ಉದ್ದೇಶ ಈಡೇರಿದಂತಾಗಿದೆ. ಒಟ್ಟು 11 ಮಂದಿಯ ಪೈಕಿ ಒಟ್ಟಾರೆ 9 ಮಂದಿಯ ಮೃತದೇಹ ಪತ್ತೆಯಾದಂತಾಗಿದೆ. ಈ ಸಂಬಂಧ ಸೂಕ್ತವಾದ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ವಿವರಿಸಿದರು.
ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ವಕೀಲರು, 11 ಮಂದಿಯ ಪೈಕಿ ಒಟ್ಟಾರೆ 9 ಮಂದಿಯ ಮೃತದೇಹ ಪತ್ತೆಯಾಗಿದ್ದು, ಪರಿಹಾರ ಕಾರ್ಯವನ್ನು ನಿಲ್ಲಿಸಲಾಗಿದೆ. ಇನ್ನಿಬ್ಬರ ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಅದನ್ನು ಬಿಡುಗಡೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಅರ್ಜಿದಾರರ ಪರ ವಕೀಲರು ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ನ್ಯಾಯಾಲಯವು ಸೂಕ್ತ ಆದೇಶ ಮಾಡಬಹುದು ಎಂದರು. ಎಲ್ಲರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಪತ್ತೆಯಾಗದ ಇಬ್ಬರು ಸಂತ್ರಸ್ತರ ಕುಟುಂಬದವರಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರವನ್ನು ಎರಡು ತಿಂಗಳ ಒಳಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಆದೇಶಿಸಿ, ಅರ್ಜಿ ಇತ್ಯರ್ಥಪಡಿಸಿತು.
ಶಿರೂರು ಗುಡ್ಡ ಕುಸಿತ ದುರಂತ:ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜುಲೈ 16 ರಂದು ಭೀಕರ ಗುಡ್ಡ ಕುಸಿತ ದುರಂತ ನಡೆದಿತ್ತು. ಈ ವೇಳೆ 11 ಮಂದಿ ಸಾವನ್ನಪ್ಪಿದ್ದರು. ಅವರ ಪೈಕಿ ಎಂಟು ಮಂದಿಯ ಮೃತದೇಹಗಳು ಪತ್ತೆಯಾಗಿದ್ದವು. ಸ್ಥಳೀಯರಾದ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ ಹಾಗೂ ಕೇರಳ ಮೂಲದ ಅರ್ಜುನ್ ಮೃತದೇಹ ಪತ್ತೆಯಾಗಿರಲಿಲ್ಲ. 72 ದಿನಗಳ ಬಳಿಕ ಕೇರಳದ ಅರ್ಜುನ್ ಶವ ಪತ್ತೆಯಾಗಿತ್ತು. ಆದರೆ ಇನ್ನಿಬ್ಬರ ಮೃತದೇಹಗಳು ಪತ್ತೆಯಾಗಿಲ್ಲ.
ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ ಪ್ರಕರಣ; ನಾಪತ್ತೆಯಾದವರ ಮೂಳೆಯನ್ನಾದರೂ ಹುಡುಕಿ ಕೊಡುವಂತೆ ಸ್ಥಳೀಯರ ಪಟ್ಟು