ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ಆರೋಪದಲ್ಲಿ ಯುವ ಬ್ರಿಗೇಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ. ರಾಜಕೀಯ ಉದ್ದೇಶದಿಂದ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ಚಕ್ರವರ್ತಿ ಸೂಲಿಬೆಲೆ ಅಲಿಯಾಸ್ ಮಿಥುನ್ ಚಕ್ರವರ್ತಿ ದೇವಿದಾಸ್ ಸೇಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ರಾಜೇಂದ್ರ ಬದಾಮಿಕರ್ ಅವರಿದ್ದ ಕಲಬುರಗಿ ನ್ಯಾಯಪೀಠ ಪೀಠ ವಿಚಾರಣೆಗೆ ತಡೆ ನೀಡಿ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ರಾಜಕೀಯ ಕಾರಣಕ್ಕಾಗಿ ದುರುದ್ದೇಶದಿಂದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ದೂರುದಾರರು ಕೆಪಿಸಿಸಿಯ ಪದಾಧಿಕಾರಿಯಾಗಿದ್ದು, ಸೂಲಿಬೆಲೆಗೆ ಮುಜುಗರ ಉಂಟು ಮಾಡಲು ಮತ್ತು ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಪ್ರಕರಣ ದಾಖಲು ಮಾಡಲಾಗಿದೆ ಎಂದು ವಿವರಿಸಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ, ಎಫ್ಐಆರ್ಗೆ ತಡೆ ನೀಡಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿತು.