ಬೆಂಗಳೂರು:ಮೈಸೂರಿನಲ್ಲಿ ಕಳೆದ ವರ್ಷ ಹಮ್ಮಿಕೊಂಡಿದ್ದ ರಾಜ್ಯ ವಕೀಲರ ಸಮ್ಮೇಳನದ ವೇಳೆ ಹಣದ ದುರ್ಬಳಕೆ ಆರೋಪಿಸಿರುವುದಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದಲ್ಲಿ ರಾಜ್ಯ ವಕೀಲರ ಪರಿಷತ್ (ಕೆಎಸ್‌ಬಿಸಿ) ಅಧ್ಯಕ್ಷರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.
ಅಲ್ಲದೆ, ಇದೇ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಭಾರತೀಯ ವಕೀಲರ ಪರಿಷತ್ (ಬಿಸಿಐ) ರಚಿಸಿರುವ ಮೂವರು ಸದಸ್ಯರ ಸಮಿತಿಗೆ ಮತ್ತೊಂದು ಪೀಠ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ದದ ತನಿಖೆ ವಜಾ ಮಾಡುವಂತೆ ಕೋರಿ ಕೆಎಸ್‌ಬಿಸಿ ಅಧ್ಯಕ್ಷ ಎಚ್. ಎಲ್. ವಿಶಾಲ್ ರಘು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ನಡೆಸಿತು.
ದೂರಿನ ವಿವರ:ರಾಜ್ಯ ವಕೀಲರ ಪರಿಷತ್ ವತಿಯಿಂದ ಮೈಸೂರಿನಲ್ಲಿ 2023ರ ಆಗಸ್ಟ್ 12 ಮತ್ತು 13ರಂದು ಎರಡು ದಿನಗಳ ಕಾಲ ರಾಜ್ಯ ವಕೀಲರ ಸಮ್ಮೇಳನ ಆಯೋಜಿಸಿತ್ತು. ಈ ಸಮಯದಲ್ಲಿ ಸಮ್ಮೇಳನದ ಪ್ರತಿನಿಧಿ ವಕೀಲರಿಂದ ತಲಾ ₹1 ಸಾವಿರದಂತೆ ಒಟ್ಟು 1,16,33,000 ರೂ. ಮೊತ್ತವನ್ನು ದೇಣಿಗೆಯಾಗಿ ಸಂಗ್ರಹಿಸಲಾಗಿತ್ತು. ರಾಜ್ಯ ಸರ್ಕಾರ 1.8 ಲಕ್ಷ ರೂ. ಅನುದಾನ ನೀಡಿತ್ತು. ಮತ್ತು ರಾಜ್ಯ ವಕೀಲರ ಪರಿಷತ್ನಿಂದ 75 ಲಕ್ಷ ರೂ. ಬಿಡುಗಡೆಯಾಗಿತ್ತು. ಒಟ್ಟು ಮೊತ್ತ 3,30,33,000 ರೂ. ಸಂಗ್ರಹವಾಗಿತ್ತು. ಈ ಹಣ ಪರಿಷತ್ನ ಬ್ಯಾಂಕ್ ಖಾತೆಗೆ ಜಮೆ ಆಗಿದ್ದು, ಈ ಹಣದ ಬಳಕೆಯಲ್ಲಿ ದುರುಪಯೋಗ ನಡೆದಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.