ಬೆಂಗಳೂರು:ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಅವಹೇಳನಾಕಾರಿ ವಿಡಿಯೋ ಟ್ವೀಟ್ ಮಾಡಿದ್ದ ಆರೋಪ ಎದುರಿಸುತ್ತಿದ್ದ ಯೂಟ್ಯೂಬರ್ ಅಜಿತ್ ಭಾರ್ತಿ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ.
ತಮ್ಮ ವಿರುದ್ಧ ನಗರದ ಎಸಿಎಂಎಂ ಮೊದಲನೇ ನ್ಯಾಯಾಲಯದಲ್ಲಿನ ವಿಚಾರಣೆ ಮತ್ತು ಅದರ ಪ್ರಕ್ರಿಯೆ ಹಾಗೂ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಕೋರಿ ಬಿಹಾರದ ಬೆಗುಸರಾಯ್ ನಿವಾಸಿಯಾದ ಅಜಿತ್ ಭಾರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಈ ಸಂಬಂಧ ಸರ್ಕಾರ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿದ ಪೀಠ, ಮುಂದಿನ ವಿಚಾರಣೆವರೆಗೂ ಅರ್ಜಿದಾರರ ವಿರುದ್ಧದ ತನಿಖೆಗೆ ತಡೆ ನೀಡಿ ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿತು. ಅಲ್ಲದೇ, ಅರ್ಜಿದಾರರ ವಿರುದ್ಧದ ಆರೋಪಗಳು ಎರಡು ರಾಷ್ಟ್ರೀಯ ಪತ್ರಿಕೆಗಳಲ್ಲಿ ಪ್ರಕಟವಾಗಿದೆ ಎಂದು ಹೇಳಲಾಗಿದೆ. ಆದರೆ, ಇದು ಕಾಂಗ್ರೆಸ್ ನಾಯಕರ ವಿರುದ್ಧದ ಆರೋಪ ಎನ್ನಲಾಗುವುದಿಲ್ಲ ಎಂದು ಪೀಠ ತಿಳಿಸಿದೆ.