ಬೆಂಗಳೂರು:ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಸತೀಶ್ ಸೈಲ್‌ಗೆ ವಿಧಿಸಿರುವ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟಿರುವ ಹೈಕೋರ್ಟ್, ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯ ಅಂತಿಮ ಆದೇಶ ಹೊರ ಬೀಳುವವರೆಗೂ ಕಾರವಾರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸದಂತೆ ನಿರ್ದೇಶನ ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಿಸಿರುವ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸತೀಶ್ ಸೈಲ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸುವುದಕ್ಕೆ ನಿರ್ಬಂಧ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಅಲ್ಲದೇ, 2024ರ ಅಕ್ಟೋಬರ್ 24ರಂದು ವಿಶೇಷ ನ್ಯಾಯಾಲಯ ಮಾಡಿರುವ ಆದೇಶಕ್ಕೆ ತಡೆ ನೀಡಿದ್ದು, ಮೇಲ್ಮನವಿ ನಿರ್ಧಾರವಾಗುವವರೆಗೆ ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 151ರ ಅನ್ವಯ ಕಾರವಾರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಬಾರದು. ಅಲ್ಲದೇ, ವಿಧಾನಸಭೆಯಲ್ಲಿ ಮತ ಚಲಾಯಿಸಲು ಅಥವಾ ಭತ್ಯೆ ಪಡೆಯಲು ಅರ್ಹರಲ್ಲ ಎಂದು ತಿಳಿಸಿದೆ.