ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ತಮ್ಮ ಪತ್ನಿ ಕಾನೂನುಬಾಹಿರವಾಗಿ ನಿವೇಶನ ಪಡೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಇಂದು ಮುಂದುವರಿಯಲಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಮಧ್ಯಾಹ್ನ 4:30ಕ್ಕೆ ವಿಚಾರಣೆ ನಡೆಯಲಿದೆ.
ಮುಖ್ಯಮಂತ್ರಿಗಳ ಪರವಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ಪರವಾಗಿ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ.
ಈ ಅರ್ಜಿ ಸಂಬಂಧ ಸೆ.2ರಂದು ನಡೆದ ವಿಚಾರಣೆ ವೇಳೆ ಸಿಎಂ ವಿರುದ್ಧದ ದೂರುದಾರ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ.ಜಿ.ರಾಘವನ್ ವಾದ ಮಂಡಿಸಿದ್ದರು. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಆದೇಶವನ್ನು ವಿರೋಧಾತ್ಮಕವಾಗಿ ನೋಡದೆ ಸಾರ್ವಜನಿಕ ಆಡಳಿತದಲ್ಲಿ ಪರಿಶುದ್ಧತೆಯ ಸಲುವಾಗಿ ನೋಡಬೇಕಾಗುತ್ತದೆ ಎಂದು ಕೆ.ಜಿ.ರಾಘವನ್ ಹೈಕೋರ್ಟ್‌ಗೆ ಮನವಿ ಮಾಡಿದ್ದರು.