ಕೆಎಎಸ್ ಅಧಿಕಾರಿಯ ಪತ್ನಿ, ಹೈಕೋರ್ಟ್ ಮಹಿಳಾ ಅಡ್ವೋಕೇಟ್ ಆತ್ಮಹತ್ಯೆ (ETV Bharat) ಬೆಂಗಳೂರು:ಕೆಎಎಸ್ ಅಧಿಕಾರಿಯ ಪತ್ನಿ ಹಾಗೂ ಹೈಕೋರ್ಟ್ ಅಡ್ವೋಕೇಟ್ ಆಗಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಶನಿವಾರ ನಡೆದಿದೆ. ಚೈತ್ರಾ ಬಿ. ಗೌಡ (35) ಸಾವನ್ನಪ್ಪಿದ ಮಹಿಳೆಯಾಗಿದ್ದು, ಮನೆಯಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದೆ.
ಹೈಕೋರ್ಟ್ನಲ್ಲಿ ಅಡ್ವೋಕೇಟ್ ಆಗಿದ್ದ ಚೈತ್ರಾ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಣ್ಣಯ್ಯ ಲೇಔಟ್ನಲ್ಲಿ ವಾಸವಾಗಿದ್ದರು. ಮಹಿಳೆಯ ಪತಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಲ್ಲಿ (ಕೆಐಡಿಬಿ) ಅಸಿಸ್ಟಂಟ್ ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದ ಚೈತ್ರಾ, ಪ್ರವೃತ್ತಿಯಲ್ಲಿ ಮಾಡೆಲ್ ಆಗಿ ಗುರುತಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಶನಿವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮನೆಯವರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರ ಮನೆಯವರು ಸಾವಿಗೆ ಗಂಡನೇ ಕಾರಣ ಎಂದು ಆರೋಪಿಸಿ ದೂರು ನೀಡಿದ್ದಾರೆ. ಒಂದು ಪುಟವಿರುವ ಡೆತ್ ನೋಟ್ ಪತ್ತೆಯಾಗಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಸಿಪಿ ಮಾಹಿತಿ:ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್, ''ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ದೂರು ಬಂದಿದೆ. ಸೀರೆಯಿಂದ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮೃತರ ಸಹೋದರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಚೈತ್ರಾರ ಮನೆಯಲ್ಲಿ ಒಂದು ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ ಅಂತಾ ಬರೆದಿರುವುದು ಗೊತ್ತಾಗಿದೆ. ಅದನ್ನು ಅವರೇ ಬರೆದಿದ್ದಾರಾ? ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ತನಿಖೆ ಬಳಿಕ ಎಲ್ಲ ವಿಚಾರ ಗೊತ್ತಾಗಲಿದೆ'' ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಕೊಡಗು: ಹತ್ಯೆಗೈದು ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಅರೆಸ್ಟ್ - Kodagu Girl murder case