ಮಂಗಳೂರು (ದಕ್ಷಿಣ ಕನ್ನಡ): ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ 16ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗೆ (12ನೇ ತರಗತಿವರೆಗೆ) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು, ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಬೇಕು. ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸಬೇಕು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.