ಕರ್ನಾಟಕ

karnataka

ETV Bharat / state

ದಕ್ಷಿಣ ಕನ್ನಡದಲ್ಲಿ ಬಿಡುವು ಕೊಡದ ಮಳೆ: ನಾಳೆ ಶಾಲಾ ಕಾಲೇಜಿಗೆ ರಜೆ - Dakshin Kannada rain - DAKSHIN KANNADA RAIN

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಬಿಡುವು ಕೊಡದ ಮಳೆ
ದಕ್ಷಿಣ ಕನ್ನಡದಲ್ಲಿ ಬಿಡುವು ಕೊಡದ ಮಳೆ (ETV Bharat)

By ETV Bharat Karnataka Team

Published : Jul 30, 2024, 9:20 PM IST

Updated : Jul 30, 2024, 10:02 PM IST

ಮಂಗಳೂರು: ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ನಾಳೆ (ಜು.31) ರಂದು ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬುಧವಾರ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿದೆ.

ದುರ್ಬಲ, ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ, ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ, ತೋಡುಗಳ ಮತ್ತು ವಿದ್ಯುತ್ ಕಂಬ, ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಸನ್ನದ್ಧವಾಗಿರುವಂತೆ ಸಚಿವರ ಸೂಚನೆ :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿರಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರನ್ಸ್ ಮೂಲಕ ಸಭೆ ನಡೆಸಿ, ಜಿಲ್ಲೆಯ ಮಳೆ ಹಾನಿ ಪರಿಸ್ಥಿತಿಯನ್ನು ಪರಾಮರ್ಶೆ ನಡೆಸಿದರು. ತುರ್ತು ಸಂದರ್ಭದಲ್ಲಿ ಕಾರ್ಯಾಚರಣೆಗೆ ತುರ್ತು ಸ್ಪಂದನಾ ಪಡೆ ಸದಾ ಸನ್ನದ್ಧವಾಗಿರಬೇಕು. ಮುಳುಗಡೆ ಪ್ರದೇಶದ ನಿವಾಸಿಗಳನ್ನು ಆದ್ಯತೆಯಲ್ಲಿ ಸ್ಥಳಾಂತರಿಸಬೇಕು ಎಂದು ಅವರು ತಿಳಿಸಿದರು.

ನದಿ ಪಾತ್ರ ಹಾಗೂ ಕಡಲಕೊರತೆ ಪ್ರದೇಶಗಳಲ್ಲಿ ಪರಿಹಾರ ಕಾರ್ಯಾಚರಣೆಗೆ ಸುಸಜ್ಜಿತ ತಂಡ ನೇಮಿಸಬೇಕು. ಭೂಕುಸಿತದಿಂದ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾದರೆ, ಶೀಘ್ರವಾಗಿ ತೆರವುಗೊಳಿಸಬೇಕು. ವಿದ್ಯುತ್ ಕಂಬಗಳು ಬಿದ್ದ ಪ್ರಕರಣಗಳಲ್ಲಿ ಕೂಡಲೇ ಕ್ರಮ ಕೈಗೊಂಡು ವಿದ್ಯುತ್ ಪುನರ್ ಸ್ಥಾಪಿಸಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಸಾರ್ವಜನಿಕ, ಜನ ಜಾನುವಾರು ಜೀವ ರಕ್ಷಣೆಗೆ ಆದ್ಯತೆ ನೀಡಬೇಕು. ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮಳೆ ಪರಿಸ್ಥಿತಿ ಮೇಲೆ ನಿಗಾ ಇಡಬೇಕು ಎಂದು ಉಸ್ತುವಾರಿ ಸಚಿವರು ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಪರಿಸ್ಥಿತಿ ಬಗ್ಗೆ ನೆರೆಯ ಜಿಲ್ಲೆಗಳೊಂದಿಗೆ ಸಂಪರ್ಕದಲ್ಲಿದ್ದು, ಸಮನ್ವಯತೆಯಿಂದ ಕಾರ್ಯಾಚರಿಸುವಂತೆ ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಜಿಲ್ಲೆಯಲ್ಲಿ ಮಳೆ ಪರಿಸ್ಥಿತಿ ಬಗ್ಗೆ ಸಚಿವರಿಗೆ ವಿವರ ನೀಡಿದರು.

ಕೊಡಗಿನಲ್ಲೂ ರೆಡ್ ಅಲರ್ಟ್:ಬುಧವಾರ ಮತ್ತು ಆಗಸ್ಟ್ 1 ರಂದು ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮಳೆ ಅವಾಂತರಗಳಿಂದ ಅಲ್ಲಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಆದ್ದರಿಂದ ಕೊಡಗು ಜಿಲ್ಲೆಗೆ ಪ್ರಯಾಣ ಬೆಳೆಸುವ ಪ್ರವಾಸಿಗರು ಕೆಲಕಾಲ ಮುಂದೂಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.

ಇದನ್ನೂ ಓದಿ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ: ತಗ್ಗು ಪ್ರದೇಶಗಳು ಜಲಾವೃತ, ಹಲವೆಡೆ ಗುಡ್ಡ ಕುಸಿತ, ಮನೆಗಳಿಗೆ ಹಾನಿ - Heavy Rain in Mangaluru

Last Updated : Jul 30, 2024, 10:02 PM IST

ABOUT THE AUTHOR

...view details