ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 2ರಂದು ಕೂಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ನದಿಗಳು ತುಂಬಿ ಹರಿಯುತ್ತಿವೆ. ಆ.2ರಂದೂ ಸಹ ರೆಡ್ ಅಲರ್ಟ್ ಘೋಷಿಸಲಾಗಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಹಾಗೂ ಐಟಿಐಗಳಿಗೆ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಉತ್ತರ ಕನ್ನಡದಲ್ಲೂ ರಜೆ ವಿಸ್ತರಣೆ:ಜಿಲ್ಲೆಯಾದ್ಯಂತ ಮಳೆ ಮುಂದುವರಿಕೆ ಮತ್ತು ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದ ಕಾರಣ ಮುಂಜಾಗೃತಾ ಕ್ರಮವಾಗಿ ಶುಕ್ರವಾರವೂ ಜಿಲ್ಲೆಯ ಕರಾವಳಿ ಹಾಗೂ ಕೆಲ ಮಲೆನಾಡು ಭಾಗದ ತಾಲೂಕುಗಳ ಶಾಲೆಗೆ ರಜೆ ನೀಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಅಂಗನವಾಡಿ, ಶಾಲೆ, ಐಟಿಐ, ಡಿಪ್ಲೊಮಾ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರಜೆ:ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಆ.2ರಂದು ರಜೆ ಘೋಷಿಸಲಾಗಿದೆ.