ಉಳ್ಳಾಲ: ಕಂಪೌಂಡ್ ಉರುಳಿ ಬಿದ್ದು, ಮನೆ ಕುಸಿದ ಕಾರಣ ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದೆ. ಘಟನಾ ಸ್ಥಳಕ್ಕೆ ವಿಧಾನಸಭಾ ಸಭಾಧ್ಯಕ್ಷ ಹಾಗೂ ಶಾಸಕ ಯು.ಟಿ ಖಾದರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಜೊತೆಗೆ ಪರಿಹಾರಕ್ಕೆ ಸಹಕಾರ ನೀಡುವುದಾಗಿ ಇದೇ ವೇಳೆ ಅವರು ಭರವಸೆ ನೀಡಿದರು.
ಮಲಗಿದ್ದಲ್ಲೇ ಶವವಾದರು:ಮನೆಯೊಳಗೆ ಮಲಗಿದ್ದ ಯಾಸಿರ್ (45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಹಾನ (11) ಮತ್ತು ರಿಫಾನ (17) ಮೃತಪಟ್ಟವರು. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಕಂಪೌಂಡ್ ಕುಸಿದು ಯಾಸಿರ್ ಅವರ ಮನೆ ಮೇಲೆ ಬಿದ್ದು, ಈ ದುರಂತ ಸಂಭವಿಸಿದೆ. ಯಾಸೀರ್ ಮಂಗಳೂರಿನ ಬಂದರಿನಲ್ಲಿ ಮಡ್ಡಿ ಆಯಿಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಊಟ ಮುಗಿಸಿ ಮನೆಯ ಕೋಣೆಯಲ್ಲಿ ಮಲಗಿದ್ದ ಇಬ್ಬರು ಪುತ್ರಿಯರು ಹಾಗೂ ದಂಪತಿ ಬೆಳಗಿನ ಜಾವ ಇಲ್ಲವಾಗಿದ್ದಾರೆ. ರಾತ್ರಿಯಿಡೀ ಮಳೆಯಾದ ಪರಿಣಾಮ ಕಂಪೌಂಡ್ ಹಾಗೂ ಎರಡು ಅಡಿಕೆ ಮರಗಳು ಯಾಸಿರ್ ಅವರ ಮನೆ ಮೇಲೆ ಉರುಳಿಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.