ಬೆಂಗಳೂರು:ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ 45,124 ಮನೆ ನಿರ್ಮಿಸುವ ಗುರಿ ಹೊಂದಲಾಗಿದೆ. ಇದರಲ್ಲಿ 8,287 ಮನೆಗಳ ನಿರ್ಮಾಣ ಮುಗಿದಿದೆ. ಇನ್ನು, 31,626 ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, ಈ ಯೋಜನೆಯಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿನ ಸಂಪರ್ಕ ವಿದ್ಯುತ್ ಸಂಪರ್ಕ, ಒಳಚರಂಡಿ ಹಾಗೂ ಎಸ್.ಟಿ.ಪಿ. ಒದಗಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ನಿರ್ಮಾಣಗೊಂಡಿರುವ ಮನೆಗಳಿಗೆ ಫಲಾನುಭವಿಗಳು ಹೋಗುತ್ತಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ.
ಅಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಿರುವುದೇ ಇದಕ್ಕೆ ಮುಖ್ಯ ಕಾರಣ. ಹಾಗಾಗಿ, ಈ ಯೋಜನೆಗೆ ವಿಶೇಷವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೇಂದ್ರ ಸರ್ಕಾರ 660 ಕೋಟಿ ರೂ. ಹಣ ಬಿಡುಗಡೆ ಮಾಡಬೇಕೆಂದು ದೆಹಲಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದು ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಬೇಕಿದೆ.
ವಿವಿಧ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಸ್ತಾವನೆಗಳ ಕುರಿತು ಇತ್ತೀಚೆಗೆ ವಿಧಾನಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಸತಿ, ವಕ್ಪ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹ್ಮದ್ ಖಾನ್, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹಾಗೂ ವಸತಿ ಇಲಾಖೆ ಅಧಿಕಾರಿಗಳು ಸುದೀರ್ಘ ಚರ್ಚೆ ನಡೆಸಿದ್ದಾರೆ.
ಶೇ.18ರಷ್ಟು ಜಿಎಸ್ಟಿ: ಶೇ.18ರಷ್ಟು ಜಿಎಸ್ಟಿಯಿಂದಾಗಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳು ತಲಾ ಒಂದೂವರೆ ಲಕ್ಷ ರೂ.ಗಳನ್ನು ಪಾವತಿಸಬೇಕಾಗುತ್ತಿದೆ. ಇದು ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಹೊರೆಯಾಗಲಿದ್ದು, ಅಧಿಕ ಹಣ ಪಾವತಿ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಬಡವರ ಮನೆ ನಿರ್ಮಾಣಕ್ಕೆ ವಿಧಿಸುತ್ತಿರುವ ಜಿಎಸ್ಟಿ ತೆರಿಗೆ ರದ್ದುಗೊಳಿಸಬೇಕಾದ ತುರ್ತು ಅಗತ್ಯ ಇರುವುದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಭೆಯಲ್ಲಿ ಅಭಿಪ್ರಾಯಪಟ್ಟಿದ್ದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮೂಲಭೂತ ಸೌಲಭ್ಯ ಕಲ್ಪಿಸುವುದು, ಬಡವರ ಮನೆ ನಿರ್ಮಾಣಕ್ಕೆ ವಿಧಿಸುತ್ತಿರುವ ಶೇ.18ರಷ್ಟು ಜಿಎಸ್ಟಿ ರದ್ದುಗೊಳಿಸುವುದು ಸೇರಿದಂತೆ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಹಲವು ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ ಒಟ್ಟು 2,865 ಕೊಳೆಗೇರಿಗಳಿದ್ದು, ಆ ಪೈಕಿ 635 ಕೊಳಗೇರಿಗಳು ಬೆಂಗಳೂರಿನಲ್ಲಿ ಇವೆ. ಕೊಳೆಗೇರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರಕ್ಕೆ 3,682 ಕೋಟಿ ರೂ. ಹಣ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆಯೂ ಕೇಂದ್ರ ವಸತಿ ಹಾಗೂ ಕೊಳೆಗೇರಿ ಮಂಡಳಿ ಸಚಿವರ ಗಮನ ಸೆಳೆಯಲು ತೀರ್ಮಾನಿಸಲಾಗಿದೆ.
"ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇ.18ರಷ್ಟು ಜಿಎಸ್ಟಿ ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ ಮನವಿ ಸಲ್ಲಿಸಲಾಗುವುದು. ಅದೇ ರೀತಿ ಕೇಂದ್ರ ನಗರಾಭಿವೃದ್ಧಿ, ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಸಚಿವರುಗಳನ್ನು ಭೇಟಿ ಮಾಡಿ ರಾಜ್ಯದ ಪ್ರಸ್ತಾವನೆಗಳಿಗೆ ಅನುಮತಿ ದೊರಕಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು" ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
''ರಾಜ್ಯದೆಲ್ಲೆಡೆ ಅಲ್ಪಸಂಖ್ಯಾತರ ಕಾಲೊನಿಗಳ ಅಭಿವೃದ್ಧಿಗೆ ಜಿಲ್ಲಾ ಹಾಗೂ ತಾಲ್ಲೂಕುವಾರು 171 ಹೊಸ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇದಕ್ಕಾಗಿ 60:40 ಹಂಚಿಕೆ ಸೂತ್ರದಲ್ಲಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದರೆ ಅಲ್ಪಸಂಖ್ಯಾತರ ಕಾಲೋನಿಗಳನ್ನು ಅಭಿವೃದ್ಧಿಪಡಿಸಬಹುದು'' ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.