ಮೈಸೂರು: ಕಷ್ಟದ ಕಾಲದಲ್ಲಿ ರಾಜ್ಯಾಧ್ಯಕ್ಷೆಯಾಗಿ ಇಡ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಕಟ್ಟಿ, ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಚಾಮರಾಜನಗರ ಕ್ಷೇತ್ರದ ಮಗಳು, ಸೊಸೆಯಾಗಿ ಈ ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಆಕಾಂಕ್ಷಿಯಾಗಿದ್ದು, ಖಂಡಿತ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿದ್ದೇನೆ. ವಿಧಾನಸಭಾ ಚುನಾವಣೆ ವೇಳೆಯೂ ಸಕಲೇಶಪುರ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ನನಗೆ ಟಿಕೆಟ್ ಸಿಗಲಿಲ್ಲ. ಹಾಗಂತ ನಾವೇನು ಪಕ್ಷದ ವಿರುದ್ಧ ಹೋಗಿಲ್ಲ. ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಗೆಲುವೊಂದೇ ನಮಗೆ ಮಾನದಂಡ. ಚಾಮರಾಜನಗರ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ಗೆ ಒಳ್ಳೆಯ ವಾತಾವರಣವಿದೆ. ನಮ್ಮ ಪ್ರಯತ್ನ ನಾವು ಮಾಡುತ್ತೇವೆ ಎಂದರು.
ಪ್ರಸ್ತುತ ದಿನಗಳಲ್ಲಿ ಮಹಿಳೆಯರ ಅನುಕೂಲತೆಗಳ ಬಗ್ಗೆ ಚರ್ಚೆ ಮಾಡಬೇಕಿದೆ. ಮಹಿಳೆಯರಿಗೆ ಕಾಂಗ್ರೆಸ್ ನೀಡುತ್ತಿರುವ ಗ್ಯಾರೆಂಟಿ ಹಣವನ್ನು ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ನಾಯಕರಿಗೆ ಜನರಿಗೆ ಒಳ್ಳೆಯ ಕೆಲಸ ಮಾಡುವ ಮನಸ್ಸಿಲ್ಲ. ರೈತರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದ್ದನ್ನು ನಾವು ನೋಡಿದ್ದೇವೆ. ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳು ಜನರ ಕೈಹಿಡಿದಿವೆ. ರಾಜ್ಯದಲ್ಲಿರುವ ಬರ ಪರಿಸ್ಥಿತಿಯನ್ನು ಸಹ ನೋಡದೇ ರೈತರ ಕ್ಷೇಮಾಭಿವೃದ್ಧಿ ಕಾಣದೇ ಹಣವನ್ನು ಕೊಡದೇ ಅನ್ಯಾಯ ಮಾಡಿದೆ ಎಂದರು.