ಹುಬ್ಬಳ್ಳಿ:''ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಬದಲಾವಣೆ ಬಗ್ಗೆ ಗೊತ್ತಿಲ್ಲ. ಬೆಳಗಾವಿ ಕ್ಷೇತ್ರದ ಟಿಕೆಟ್ ನನಗೆ ಸಿಕ್ಕೇ ಸಿಗುತ್ತದೆ'' ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಬೆಳಗಾವಿ ಟಿಕೆಟ್ಗಾಗಿ ಅಂತಿಮ ಪ್ರಯತ್ನ ನಡೆಸಿರುವ ಶೆಟ್ಟರ್ ಅವರು ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿದರು. ಹೈಕಮಾಂಡ್ ಜೊತೆ ಚರ್ಚಿಸಿ ನೇರವಾಗಿ ಹುಬ್ಬಳ್ಳಿಗೆ ಆಗಮಿಸಿದ ಶೆಟ್ಟರ್ ನಗುಮುಖದಿಂದಲೇ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ''ಎರಡು ದಿನಗಳೊಳಗೆ ಲಿಸ್ಟ್ ಬಿಡುಗಡೆಯಾಗುತ್ತೆ. ವರಿಷ್ಠರನ್ನು ನಾನು ಭೇಟಿಯಾಗಿದ್ದೇನೆ. ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಜೊತೆಯೂ ಚರ್ಚಿಸಿದ್ದೇನೆ. ಬಿಜೆಪಿ ಸ್ಥಳೀಯ ನಾಯಕರ ಜೊತೆಗೆ ಸಮಾಲೋಚನೆ ಮಾಡಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸವಾಗಿದೆ. ಪ್ರಧಾನಿ ನೇತೃತ್ವದಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಅಭ್ಯರ್ಥಿಗಳ ಲಿಸ್ಟ್ ಫೈನಲ್ ಆಗುತ್ತೆ. ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಿದಾಗ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋ ವಿಶ್ವಾಸವಿದೆ'' ಎಂದರು.